ಸಾರಾಂಶ
ಕನ್ನಡಪ್ರಭ ವಾರ್ತೆ ಭಾರತೀನಗರ
ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಬಿಎಫ್‌ಟಿಗಳಿಗೆ ಭದ್ರತೆ ಇಲ್ಲದೆ ಸಾವನ್ನಪ್ಪುತ್ತಿದ್ದು ಸರ್ಕಾರ ಆರೋಗ್ಯ ವಿಮೆ ಕಲ್ಪಿಸಬೇಕು ಎಂದು ಬೇರ್ ಫೂಟ್ ಟೆಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಭೀಮೇಶ್ ಒತ್ತಾಯಿಸಿದರು.ದೊಡ್ಡಅರಸಿನಕೆರೆ ಗ್ರಾಮದಲ್ಲಿ ಬಿಎಫ್‌ಟಿಯಾಗಿ ಮದ್ದೂರು ತಾಲೂಕು ಪಂಚಾಯ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಎಂ.ಪ್ರಸನ್ನ ಅನಾರೋಗ್ಯದಿಂದ ನಿಧನರಾದ ಹಿನ್ನೆಲೆಯಲ್ಲಿ ಕುಟುಂಬದವರಿಗೆ 1 ಲಕ್ಷ ಧನ ಸಹಾಯ ಮಾಡಿ ಮಾತನಾಡಿದರು.
ಸರ್ಕಾರದಿಂದ ಬಿಎಫ್‌ಟಿಗಳಿಗೆ ಇಎಸ್‌ಐ, ಪಿಎಫ್, ಮತ್ತು ಆರೋಗ್ಯ ವಿಮೆ ಸೌಲಭ್ಯ ಇಲ್ಲದಿರುವುದರಿಂದ ಎಷ್ಟೋ ಕುಟುಂಬಗಳು ಬಳಲುತ್ತಿವೆ. ಮೃತರ ಕುಟುಂಬಕ್ಕೆ ಸಾಂತ್ವನ ನೀಡಿ, ಅವರ ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಆಸರೆಯಾಗಿ ಕರ್ನಾಟಕ ರಾಜ್ಯ ಬೇರ್ ಫೂಟ್ ಟೆಕ್ನಿಷಿಯನ್ಸ್ ಕ್ಷೇಮಾಭಿವೃದ್ಧಿ ಸಂಘ ಸಹಾಯ ಮಾಡುತ್ತಾ ಬಂದಿದೆ ಎಂದರು.ಈ ವೇಳೆ ಉಪಾಧ್ಯಕ್ಷ ಕಲ್ಯಾಣಿ ಪೂಜಾರಿ, ಮಹಿಳಾ ಉಪಾಧ್ಯಕ್ಷೆ ಲತಾ, ಖಜಾಂಚಿ ಡಿ.ಪಿ.ಕಿರಣ್ ಕುಮಾರ್, ಕಾರ್ಯದರ್ಶಿ ಹನುಮಂತಪ್ಪ, ಕಾರ್ಯಾಧ್ಯಕ್ಷ ಬಸವರಾಜು, ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್, ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜು, ಪದಾಧಿಕಾರಿಗಳಾದ ಶಿವರಾಜು, ಮಲ್ಲೇಶ್, ಮಾದೇಗೌಡ, ಶಿಲ್ಪಹನುಮೇಶ್, ರವಿ, ನಿಶ್ಚಿತ ಸೇರಿದಂತೆ ಜಿಲ್ಲಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.ಅಲ್ಪ ಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ಒದಗಿಸಿ: ಡಾ ಕುಮಾರ
ಮಂಡ್ಯ:ಜಿಲ್ಲೆಯಲ್ಲಿರುವ ಅಲ್ಪ ಸಂಖ್ಯಾತರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ. ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳು ಅಲ್ಪ ಸಂಖ್ಯಾತರಿಗೆ ಸರಿಯಾದ ರೀತಿಯಲ್ಲಿ ಸಿಗುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ, ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಇರುವುದು ಅಲ್ಪ ಸಂಖ್ಯಾತರ ಕಲ್ಯಾಣಕ್ಕಾಗಿ. ಆದ್ದರಿಂದ ಅಲ್ಪ ಸಂಖ್ಯಾತರಿಗೆ ದೊರೆಯುವ ಯೋಜನೆ, ಸಾಲ, ಸೌಲಭ್ಯ ಸವಲತ್ತುಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಜಾಗೃತಿ ಮೂಡಿಸಿ ವ್ಯಾಪಕ ಪ್ರಚಾರ ಮಾಡುವಂತೆ ಸೂಚಿಸಿದರು.ಜಿಲ್ಲೆಯಲ್ಲಿರುವ ಎಲ್ಲಾ ಇಲಾಖೆಗಳಿಂದ ಅಲ್ಪ ಸಂಖ್ಯಾತರಿಗೆ ಸರ್ಕಾರದಡಿ ಬರುವ ಯೋಜನೆಗಳಿಗೆ ಸಂಬಂಧಿಸಿದಂತೆ ಸೂಕ್ತ ತರಬೇತಿ ನೀಡಬೇಕು. ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ನೀಡಿ ಸ್ವಯಂ ಉದ್ಯೋಗ ಕಲ್ಪಿಸಿ. ಅವರು ಯಾವುದೇ ಸೌಲಭ್ಯದಿಂದ ವಂಚಿತರಾಗಬಾರದು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಶೇಕ್ ತನ್ವಿರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಡಿವೈಎಸ್ಪಿ ಗಂಗಾಧರಸ್ವಾಮಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್ ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.