ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಲೋಕಸಭಾ ಚುನಾವಣೆಯ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚಿಸಲಾಗಿದ್ದು, ಸ್ವೀಪ್ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿಯಾದ ಜಿಪಂ ಸಿಇಒ ಕೆ.ಎಂ. ಗಾಯತ್ರಿ ತಿಳಿಸಿದರು.ಜಿಪಂ ಸಭಾಂಗಣದಲ್ಲಿ ಸಾರ್ವಜನಿಕರಲ್ಲಿ ನೈಜ ಮತದಾನದ ಅರಿವು ಮತ್ತು ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್ ಸಮಿತಿಯಿಂದ ಸ್ವೀಪ್ ಚಟುವಟಿಕೆ ಕಾರ್ಯಕ್ರಮಗಳನ್ನು ವ್ಯವಸ್ಥಿಕವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸುವ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.
ವಿಶೇಷ ಚೇತನರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು ಹಾಗೂ ವಲಸೆ ಕಾರ್ಮಿಕರು ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆಗೊಳ್ಳುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉತ್ತಮ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ, ಆ ಭಾಗದಲ್ಲಿ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು ಸ್ವಿಪ್ ಚಟುವಟಿಕೆಗಳನ್ನು ನಡೆಸುವ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.ಬಿಸಿಎಂ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ರಸಪ್ರಶ್ನೆ, ಪ್ರಬಂಧ ಸ್ಪರ್ಧೆಯನ್ನ ನಡೆಸುವ ಮೂಲಕ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು. ಜನಸಾಮಾನ್ಯರಿಗೆ ಮತದಾನದ ಮಹತ್ವದ ಬಗ್ಗೆ, ಬೀದಿ ನಾಟಕ, ಕಿರು ನಾಟಕಗಳ ಮೂಲಕ ಜಾಗೃತಿ ಮೂಡಿಸಬೇಕು. ಮತದಾರರಿಗೆ ಸ್ಟ್ರೀಟ್ ಡೆಮಾಕ್ರಸಿ ಫೆಸ್ಟಿವಲ್ ರೀತಿಯಲ್ಲಿ ಆಕರ್ಷಕವಾಗಿ ಕಾಣುವಂತೆ ಮಾಡಬೇಕು ಎಂದರು.
ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನಸಾಮಾನ್ಯರಿಗೆ ಮನೆ ಮನೆಗಳಿಗೆ ತೆರಳಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಎಲ್ಲಾ ಸಮಿತಿ ಸದಸ್ಯರು ತಮಗೆ ವಹಿಸಿದ ಕಾರ್ಯ ಹಂಚಿಕೆ ವ್ಯಾಪ್ತಿಯಲ್ಲಿ ನಡೆಸುವ ಸ್ವೀಪ್ ಚಟುವಟಿಕೆಗಳ ಸಂಬಂಧ ಪ್ರತಿನಿತ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಸ್ವೀಪ್ ಕಾರ್ಯಕ್ರಮದ ಚಟುವಟಿಕೆಗಳ ಕುರಿತು ಇಲಾಖಾ ಅಧಿಕಾರಿಗಳು ಆಲ್ಬಂ ತಯಾರಿಸಿ ತಮ್ಮ ಇಲಾಖೆಯಲ್ಲಿ ಸಂರಕ್ಷಿಸಿಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.ಈ ವರ್ಷದ ಸ್ವೀಪ್ ಘೋಷವಾಕ್ಯ ಚುನಾವಣಾ ಪರ್ವ ದೇಶದ ಗರ್ವ ಯಾವೊಬ್ಬ ಮತದಾರನೂ ಮತದಾನದಿಂದ ಹೊರಗುಳಿಯಬಾರದು. ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯ ಹೊಂದಬೇಕು ಎಂಬ ಘೋಷವಾಕ್ಯದೊಂದಿಗೆ ಮತದಾರರ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಶುಭಾ, ಕೇಂದ್ರ ಪ್ರಚಾರ ಇಲಾಖೆಯ ಉಪ ನಿರ್ದೇಶಕಿ ಶ್ರುತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.