ಸಾರಾಂಶ
ಸಾಗರ: ವಿದ್ಯಾರ್ಥಿ ಜೀವನದಲ್ಲಿ ಪದವಿ ಹಂತ ಅತಿ ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಅವಿರತ ಪ್ರಯತ್ನ ಮಾಡಿ ಉತ್ತಮ ಫಲಿತಾಂಶ ಪಡೆದು ಪೋಷಕರ ನಿರೀಕ್ಷೆ ಸಫಲಗೊಳಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ೨೦೨೫-೨೬ನೇ ಸಾಲಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ, ಪ್ರಿಯದರ್ಶಿನಿ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿ, ಶ್ರೀಮತಿ ಇಂದಿರಾಗಾಂಧಿ ಕಾಲೇಜು ರಾಜ್ಯದಲ್ಲಿಯೇ ಮಾದರಿಯಾಗಿ ಕೆಲಸ ಮಾಡುತ್ತಿದೆ. ಕಾಲೇಜಿನ ಅಭಿವೃದ್ಧಿಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದರು.ಈ ಕಾಲೇಜಿನಲ್ಲಿ ಅತಿಹೆಚ್ಚು ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿದ್ದು, ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಯಲ್ಲೂ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಕಾಲೇಜಿಗೆ ರಂಗಮಂದಿರ ನಿರ್ಮಾಣಕ್ಕೆ ಬೇಕಾದ ಸಹಕಾರ ನೀಡಲಾಗುತ್ತದೆ ಎಂದರು.
ಚಿತ್ರನಟ ಅರುಣ್ ಸಾಗರ್ ಮಾತನಾಡಿ, ವಿದ್ಯೆ ನಮಗೆ ಮಾನವೀಯ ಮೌಲ್ಯವನ್ನು ಕಲಿಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಸಾಧನೆಗೆ ಹೆಚ್ಚಿನ ಅವಕಾಶವಿರುತ್ತದೆ. ನಿಮ್ಮ ಆಸಕ್ತಿದಾಯಕ ಕ್ಷೇತ್ರವನ್ನು ಗುರುತಿಸಿಕೊಳ್ಳಲು ವಿದ್ಯಾರ್ಥಿ ಜೀವನ ಸಕಾಲವಾಗಿರುತ್ತದೆ. ಇಂದಿರಾಗಾಂಧಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ನಮ್ಮೂರಿನ ಕೀರ್ತಿಯನ್ನು ಬೆಳಗಿಸುತ್ತಿದ್ದಾರೆ ಎಂದು ಹೇಳಿದರು.ನಿವೃತ್ತ ಪ್ರಾಚಾರ್ಯೆ ಪ್ರೊ. ರಾಜೇಶ್ವರಿ ಎಚ್., ವರ್ಗಾವಣೆಗೊಂಡ ಪ್ರಾಧ್ಯಾಪಕರಾದ ಡಾ. ಎಂ.ರಂಗಣ್ಣನವರ್, ಡಾ. ಮಹಾವೀರ, ಮಾರುತಿ ಗೌಡ, ಲೋಕೇಶಪ್ಪ ಎಚ್. ಅವರನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಪ್ರೊ. ಚಂದ್ರಶೇಖರ ಟಿ. ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಮಧುಮಾಲತಿ, ಬಿ.ಎಚ್.ಲಿಂಗರಾಜ್, ಗಣಪತಿ ಮಂಡಗಳಲೆ, ಸೈಯದ್ ಜಾಕೀರ್, ಎಲ್.ಚಂದ್ರಪ್ಪ, ಪ್ರಮುಖರಾದ ಡಾ. ಶಿವಾನಂದ ಭಟ್, ಡಾ. ರತ್ನಾಕರ್, ಯತೀಶ್ ಕುಮಾರ್ ಇನ್ನಿತರರು ಹಾಜರಿದ್ದರು.