ಸಾರಾಂಶ
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಆಶ್ರಯದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಗ್ರಾಮ ಪಂಚಾಯಿತಿ ನೌಕರರು ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಆಶ್ರಯದಲ್ಲಿ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಈ ಸಂದರ್ಭ ಮಾತನಾಡಿದ ಸಂಘ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಗ್ರಾಮ ಪಂಚಾಯಿತಿ ನೌಕರರಿಗೆ ೨೦೧೬ರಲ್ಲಿ ವೇತನ ಹೆಚ್ಚಳ ಮಾಡಿದ್ದರು. ಆ ನಂತರ ಯಾವುದೇ ವೇತನ ಹೆಚ್ಚಳ ಪ್ರಕ್ರಿಯೆ ನಡೆಯಲಿಲ್ಲ. ಅವರ ಕೆಲಸಕ್ಕೆ ಇಂದು ಸರಿಯಾದ ವೇತನ ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇವತ್ತಿನ ಬೆಲೆ ಏರಿಕೆ ನಡುವೆ ಪಂಚಾಯಿತಿ ನೌಕರರು ಅವರ ಕುಟುಂಬವನ್ನು ಸಾಗಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರ ಜೀತದಾಳುಗಳನ್ನಾಗಿ ಕೆಲಸ ಮಾಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಿಂದ ಕನಿಷ್ಠ ವೇತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದಕ್ಕೆ ಕೆಲವು ಪ್ಲಾಂಟೇಷನ್ ಮಾಲೀಕರು ತಡೆವೊಡ್ಡುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಗ್ರಾಮ ಪಂಚಾಯಿತಿ ನೌಕರರು ವಂಚನೆಗೆ ಒಳಗಾಗುತ್ತಿದ್ದಾರೆ. ಇಂದಿನ ಬೆಲೆ ಏರಿಕೆ ನಡುವೆ ನೌಕರ ಬದುಬೇಕಾದರೆ ಕನಿಷ್ಠ ವೇತನ ೩೮,೦೦೦ ಆದರು ಬೇಕಾಗಿದೆ. ಇದೇ ರೀತಿಯಲ್ಲಿ ಪೌರಕಾರ್ಮಿಕರು, ಕಂಪ್ಯೂಟರ್ ಆಪರೇಟರ್, ಬಿಲ್ ಕಲೆಕ್ಟರ್, ವಾಟರ್ ಮ್ಯಾನ್ ಹುದ್ದೆಯಲ್ಲಿರುವವರಿಗೆ ಕನಿಷ್ಠ ವೇತನ ನೀಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವೃತರಹದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಸಂಘ ಉಪಾಧ್ಯಕ್ಷ ದಿಲೀಪ್, ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಮೂರ್ತಿ, ಮಹಾಲಿಂಗ, ಎಂ.ಎಂ.ಸೌಮ್ಯ, ಎಂ.ಎಸ್.ಸೌಮ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಗ್ರಾ.ಪಂ ಗಳ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.