ಡಿಎಂಎಫ್ ನಿಧಿಯ ಅನುದಾನದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

| Published : Dec 17 2024, 12:46 AM IST

ಡಿಎಂಎಫ್ ನಿಧಿಯ ಅನುದಾನದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿತ್ರದುರ್ಗ: ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಅನುದಾನದಿಂದ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಪ್ರಗತಿಯಲ್ಲಿರುವ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿತ್ರದುರ್ಗ: ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಅನುದಾನದಿಂದ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಪ್ರಗತಿಯಲ್ಲಿರುವ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಅನುದಾನದಿಂದ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಎಂಎಫ್ ನಿಧಿಯ ಅನುದಾನದಲ್ಲಿ ಹಂಚಿಕೆ ಮಾಡಲಾದ ಒಟ್ಟು ಕಾಮಗಾರಿಗಳ ವಿವರ, ಪೂರ್ಣಗೊಂಡಿರುವ, ಪ್ರಗತಿ ಹಾಗೂ ಬಾಕಿ ಇರುವ ಕಾಮಗಾರಿಗಳ ಮಾಹಿತಿ, ಅನುದಾನದ ಲಭ್ಯತೆ ಹಾಗೂ ಬೇಕಾಗಿರುವ ಅನುದಾನದ ಮಾಹಿತಿ ಸೇರಿದಂತೆ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಬಳಕೆ ಪ್ರಮಾಣ ಪತ್ರದ ಸಂಪೂರ್ಣ ಮಾಹಿತಿಯೊಂದಿಗೆ ಒಂದು ವಾರದೊಳಗೆ ಕಾಮಗಾರಿಗಳ ಸಂಪೂರ್ಣ ವರದಿ ನೀಡಬೇಕು ಎಂದು ಸೂಚಿಸಿದರು.

ನಿರ್ಮಿತಿ ಕೇಂದ್ರದ ವತಿಯಿಂದ ಡಿಎಂಎಫ್ ನಿಧಿಯ ಅನುದಾನದಲ್ಲಿ 2021-22ರಿಂದ ಇಲ್ಲಿಯವರೆಗೂ 420 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇದರಲ್ಲಿ 286 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಳಕೆ ಪ್ರಮಾಣವನ್ನೂ ಸಲ್ಲಿಸಲಾಗಿದೆ ಎಂದು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು, ಪ್ರಗತಿಯಲ್ಲಿರುವ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ತಕ್ಷಣವೇ ಪ್ರಾರಂಭ ಮಾಡುವ ಮೂಲಕ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಬೇಕು. ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ. ನಿರ್ಮಾಣ ಸಂಸ್ಥೆಗಳ ತಂಡ ನಿಯೋಜಿಸುವ ಮೂಲಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯ ವಿಳಂಬವಾಗಬಾರದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.