ಅಭಿವೃದ್ಧಿಗೆ ಆದ್ಯತೆ ನೀಡಿ ಅನುದಾನ ಮಂಜೂರು

| Published : Apr 30 2025, 12:39 AM IST

ಸಾರಾಂಶ

Grants are sanctioned on priority for development

-೪.೯೦ ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಹೆಚ್.ಡಿ. ತಮ್ಮಯ್ಯ ಶಂಕುಸ್ಥಾಪನೆ

---

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ರಾಜ್ಯಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಜನಪರ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿಗೂ ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಮಂಗಳವಾರ ಕ್ಷೇತ್ರದ ಸಿಂದಿಗೆರೆ, ಈಶ್ವರಹಳ್ಳಿ, ಕಳಸಾಪುರ ಈ ಮೂರು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ೪.೯೦ ಕೋಟಿ ರೂ. ವೆಚ್ಚದ ಹಲವಾರು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕ್ಷೇತ್ರದ ೩೪ ಗ್ರಾಮ ಪಂಚಾಯಿತಿಗಳಲ್ಲಿ ಬಹುತೇಕ ಕಾಮಗಾರಿಗಳು ಆರಂಭವಾಗಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ, ಈ ಹಣದಲ್ಲಿ ಚರಂಡಿ, ಕಾಂಕ್ರೀಟ್ ರಸ್ತೆ, ದೇವಾಲಯ, ಸಮುದಾಯ ಭವನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಪ್ರತಿ ಗ್ರಾಮ ಪಂಚಾಯಿತಿಗೆ ೧ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಈ ಹಣದಲ್ಲಿ ಈಗಾಗಲೇ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದ್ದು ಜೊತೆಗೆ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ೧೪ ಕೋಟಿ ರೂ ಬಿಡುಗಡೆಯಾಗಿದೆ ಎಂದು ಹೇಳಿದರು.

ಕಳಸಾಪುರ-ಬೆಳವಾಡಿ ರಸ್ತೆ ಕಾಮಗಾರಿ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಜನರ ಓಡಾಟಕ್ಕೆ ಮುಕ್ತಗೊಳಿಸಲಾಗುವುದು. ಬಯಲು ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವುದಾಗಿ ಭರವಸೆ ನೀಡಿದರು.

ಕೆರೆ ತುಂಬಿಸುವ ಯೋಜನೆಗೆ ವಿಶ್ವೇಶ್ವರಯ್ಯ ಜಲ ನಿಗಮದ ಮಂಡಳಿ ಸಭೆಯಲ್ಲಿ ಭದ್ರಾ ಉಪ ಕಣಿವೆ ಕುಡಿವ ನೀರು, ಕೆರೆ ತುಂಬಿಸುವ ಯೋಜನೆಗೆ ೩೧೧ ಕೋಟಿ ರೂ. ವೆಚ್ಚದ ಮೂರನೇ ಹಂತದ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು, ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಸಚಿವರು, ಶಾಸಕರನ್ನು ಆಹ್ವಾನಿಸಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಆದೇಶದಂತೆ ಜನಸಂಪರ್ಕ ಸಭೆ ನಡೆಸುವ ಮೂಲಕ ಜನರ ಬಳಿಗೆ ಅಧಿಕಾರಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆಂದು ಭರವಸೆ ನೀಡಿದರು.

ಕಳಸಾಪುರ ಗ್ರಾ.ಪಂ ಅಧ್ಯಕ್ಷೆ ರಾಧ, ಈಶ್ವರಹಳ್ಳಿ ಗ್ರಾ.ಪಂ ಅಧ್ಯಕ್ಷೆ ಮಂಜಮ್ಮ, ಸಿಂದಿಗೆರೆ ಗ್ರಾ.ಪಂ ಅಧ್ಯಕ್ಷೆ ಲತಾ ನಟೇಶ್, ಬಗರ್ ಹುಕ್ಕುಂ ಸದಸ್ಯ ಕೆಂಗೇಗೌಡ, ಮೂರೂ ಪಂಚಾಯಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.