ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಬೌದ್ಧಿಕ ವಿಶೇಷ ಚೇತನ ಮಕ್ಕಳ ವಸತಿ ಶಾಲೆಗಳ ಶಿಕ್ಷಕರ ಕುಂದುಕೊರತೆ ಸಭೆ ನಡೆಯಿತು.ಜಿಪಂ ಕೆ.ಆರ್.ನಂದಿನಿ ಅವರು, ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 6 ಬೌದ್ಧಿಕ ವಿಶೇಷ ಚೇತನ ಮಕ್ಕಳ ವಸತಿ ಶಾಲೆಗಳ ಶಿಕ್ಷಕರು ಶಾಲೆಗಳ ಆಡಳಿತ, ಮೂಲಸೌಕರ್ಯ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ಬೌದ್ಧಿಕ ವಿಶೇಷ ಚೇತನ ಮಕ್ಕಳ ಶಾಲೆಗಳನ್ನು ನಡೆಸುತ್ತಿರುವ ಸಂಸ್ಥೆಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ಸುರಕ್ಷಿತ ಹಾಗೂ ಸೂಕ್ತ ಕಲಿಕಾ ವಾತಾವರಣವನ್ನು ಕಲ್ಪಿಸಿರುವ ಬಗ್ಗೆ, ಸರ್ಕಾರದ ನಿಯಮಾವಳಿಗಳ ಪ್ರಕಾರ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವುದು, ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಮತ್ತು ಉದ್ದೇಶಿತ ರೀತಿಯಲ್ಲಿ ಬಳಸುತ್ತಿರುವ ಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸಬೇಕು ಜಿಪಂ ಸಿಇಒ ಸೂಚಿಸಿದರು.ಈ ಸಂಬಂಧ ಅಂಗವಿಕಲರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಮೇಲ್ವಿಚಾರಣಾ ಸಭೆ ಆಯೋಜಿಸಿ ಶಾಲೆಗಳ ಕಾರ್ಯನಿರ್ವಹಣೆ, ಮಕ್ಕಳ ಶೈಕ್ಷಣಿಕ ಪ್ರಗತಿ, ಮೂಲಸೌಕರ್ಯ, ಸಿಬ್ಬಂದಿ ಲಭ್ಯತೆ, ಅನುದಾನದ ಬಳಕೆ ಹಾಗೂ ನಿಯಮಗಳ ಅನುಸರಣೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ ಕಂಡುಬರುವ ಲೋಪಗಳನ್ನು ತ್ವರಿತವಾಗಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಮಾತನಾಡಿದ ಶಿಕ್ಷಕರು, ಶಾಲೆಗಳಿಗೆ ಅನುದಾನ ಬಿಡುಗಡೆ ವಿಳಂಬವಾಗುತ್ತಿರುವ ಕಾರಣ ಶಿಕ್ಷಕರಿಗೆ ಮಾಸಿಕ ಗೌರವಧನ ಪಾವತಿಯಲ್ಲೂ ವಿಳಂಬವಾಗುತ್ತಿದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೆ.ಆರ್.ನಂದಿನಿ ಅವರು, ಜಿಪಂ ಸಾಮಾನ್ಯ ಸಭೆಯಲ್ಲಿ ವೇತನೇತರ ಮೊತ್ತದ ಕ್ರಿಯಾಯೋಜನೆಗೆ ಈಗಾಗಲೇ ಅನುಮೋದನೆ ದೊರೆತಿದೆ. ಸಂಬಂಧಿತ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ತುರ್ತಾಗಿ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಸೌಲಭ್ಯಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಜಿಪಂ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್ ನಾಯಕ್, ಅಂಗವಿಕಲರ ಅಭಿವೃದ್ಧಿ ಇಲಾಖೆಯ ಕೋಮಲ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.