ಬೇಬಿ ಗ್ರಾಮದ ವಿವಿಧ ಭಾಗಗಳಲ್ಲಿ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳಿಗೆ ಅನುದಾನ ಒದಗಿಸುವ ಮೂಲಕ ಸ್ಥಳೀಯ ನಿವಾಸಿಗಳ ಹಲವು ದಿನಗಳ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಯೊಳಗೆ ಪೂರ್ಣಗೊಳ್ಳುವಂತೆ ಸಂಬಂಧಪಟ್ಟ ಅಕಾರಿಗಳು ಮತ್ತು ಗುತ್ತಿಗೆದಾರರು ಗಮನಹರಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಬೇಬಿ ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಆದ್ಯತೆ ನೀಡಲಾಗಿದ್ದು, ಒಟ್ಟು ೨೦ ಲಕ್ಷ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಿ.ರವಿಕುಮಾರ್ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಸ್ತೆ ಮತ್ತು ಚರಂಡಿ ವ್ಯವಸ್ಥೆಗಳು ಪ್ರಮುಖವಾಗಿದ್ದು, ಜನರ ದೈನಂದಿನ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಮಳೆನೀರು ಹಾಗೂ ಕೊಳಚೆ ನೀರು ಸರಾಗವಾಗಿ ಹರಿದುಹೋಗಲು ಅಗತ್ಯವಾದ ಚರಂಡಿ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಬೇಬಿ ಗ್ರಾಮದ ವಿವಿಧ ಭಾಗಗಳಲ್ಲಿ ಅಗತ್ಯವಿರುವ ಮೂಲಸೌಕರ್ಯ ಕಾಮಗಾರಿಗಳಿಗೆ ಅನುದಾನ ಒದಗಿಸುವ ಮೂಲಕ ಸ್ಥಳೀಯ ನಿವಾಸಿಗಳ ಹಲವು ದಿನಗಳ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಯೊಳಗೆ ಪೂರ್ಣಗೊಳ್ಳುವಂತೆ ಸಂಬಂಧಪಟ್ಟ ಅಕಾರಿಗಳು ಮತ್ತು ಗುತ್ತಿಗೆದಾರರು ಗಮನಹರಿಸಬೇಕು ಎಂದು ಶಾಸಕರು ಸೂಚಿಸಿದರು.

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ:

ಭೂಮಿ ಪೂಜೆ ಕಾರ್ಯಕ್ರಮದ ಬಳಿಕ ಶಾಸಕ ಪಿ.ರವಿಕುಮಾರ್, ಗ್ರಾಮಸ್ಥರಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು. ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ಗ್ರಾಮದ ವಿವಿಧ ಮೂಲಸೌಕರ್ಯ ಅಗತ್ಯಗಳ ಕುರಿತು ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.

ಗ್ರಾಮದ ಮುಖಂಡರು ಹಾಗೂ ಹಿರಿಯರೊಂದಿಗೆ ಗ್ರಾಮದ ಪ್ರಸ್ತುತ ಅಭಿವೃದ್ಧಿ ಸ್ಥಿತಿಗತಿ ಕುರಿತು ಚರ್ಚೆ ನಡೆಸಿದ ಶಾಸಕರು, ಮುಂದಿನ ಹಂತದಲ್ಲಿ ಕೈಗೆತ್ತಿಕೊಳ್ಳಬೇಕಾದ ಅಗತ್ಯ ಕಾಮಗಾರಿಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ಸಾರ್ವಜನಿಕರ ಅಗತ್ಯಗಳಿಗೆ ಅನುಗುಣವಾಗಿ ಆದ್ಯತೆ ನಿಗದಿಪಡಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.

ಗ್ರಾಮೀಣ ಭಾಗಗಳ ಅಭಿವೃದ್ಧಿ ಎನ್ನುವುದು ಕೇವಲ ಒಂದು ಕಾಮಗಾರಿಗೆ ಸೀಮಿತವಾಗದೆ, ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಇತರ ಮೂಲಸೌಕರ್ಯಗಳ ಸಮನ್ವಯದೊಂದಿಗೆ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಬೇಬಿ ಗ್ರಾಮದ ಅಗತ್ಯ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲು ಗಮನಹರಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಜರಿದ್ದರು.