ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳಿಗೆ ಬಿಡುಗಡೆಯಾಗಿರುವ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.

ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳಿಗೆ ಬಿಡುಗಡೆಯಾಗಿರುವ ಹಣವನ್ನು ಹಿಂಪಡೆಯುವ ಪ್ರಕ್ರಿಯೆಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮರಣ ಹೊಂದಿದವರ ಮಾಹಿತಿ ಗ್ರಾ.ಪಂ. ಮತ್ತು ತಾ.ಪಂ. ಕಚೇರಿಗಳಲ್ಲಿ ಲಭ್ಯವಿರುವುದರಿಂದ, ಸಂಬಂಧಪಟ್ಟ ಕಾರ್ಯನಿರ್ವಾಹಕ ಅಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿ, ಮಾಹಿತಿಯನ್ನು ಪರಿಶೀಲಿಸಿ, ತಾಲೂಕು ಮಟ್ಟದ ಸಭೆಗೆ ಸಲ್ಲಿಸಬೇಕು. ಗೃಹಲಕ್ಷ್ಮಿ ಯೋಜನೆಯಡಿ ದುರುಪಯೋಗವಾಗಿರುವ ಹಣವನ್ನು ಮರುಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ವಿಳಂಬವಿಲ್ಲದೆ ಮಾಹಿತಿ ಸಂಗ್ರಹಣೆ ಹಾಗೂ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಪಡಿತರ ಚೀಟಿಗೆ ಸಂಬಂಧಿಸಿದಂತೆ ಇ-ಕೆವೈಸಿ ಮಾಡಬೇಕಾಗಿದ್ದು, ಪ್ರಸ್ತುತ ಶೇ.89ರಷ್ಟು ಇ-ಕೆವೈಸಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಸಮಿತಿ ಉಪಾಧ್ಯರಾದ ಸುರೇಖಾ ಚಂದ್ರಹಾಸ್, ಶೇಖರ್ ಕುಕ್ಕೆಡಿ, ನಾರಾಯಣ ನಾಯಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೈಮೆಂಟ್ ಕುಟಿನ್ಹ, ಜಯಂತಿ ಬಿಎ, ಪಿಎಸ್ ಗಂಗಾಧರ್, ಉಮಾನಾಥ್ ಶೆಟ್ಟಿ, ಆಲಿಸ್ಟನ್ ಕ್ಲೈವ್ ಡಿ ಕುನ್ಹ, ಎಸ್.ರಫೀಕ್ ಮತ್ತಿತರರು ಇದ್ದರು.

ಸಭೆಯಲ್ಲಿ ವಿಭಾಗೀಯ ಮಟ್ಟದ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.