ಸಾರಾಂಶ
ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೌಷ್ಠಿಕ ಆಹಾರಕ್ಕೆ ಜಿ.ಎಸ್.ಟಿ. ವಿಧಿಸಬಾರದು ಎಂಬ ಆಗ್ರಹ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ । ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೌಷ್ಠಿಕ ಆಹಾರಕ್ಕೆ ಜಿ.ಎಸ್.ಟಿ. ವಿಧಿಸಬಾರದು ಎಂಬ ಆಗ್ರಹ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದರೂ ಕೂಡ ಇದುವರೆಗೂ ಕಾಯಂಗೊಳಿಸಿಲ್ಲ. ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು. ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾಯ ನೀಡಬೇಕು. ವೇತನ ಹೆಚ್ಚಿಸಬೇಕು. ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಕಾಯಂ ಮಾಡಬೇಕು ಎಂದು ಆಗ್ರಹಿಸಿದರು.ಕೇಂದ್ರ ಸರ್ಕಾರ ಕನಿಷ್ಠ ₹26 ಸಾವಿರ ಗೌರವಧನ ಹೆಚ್ಚಿಸಬೇಕು. ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ 15 ಸಾವಿರಕ್ಕೆ ಗೌರವಧನ ಹೆಚ್ಚಿಸಿ ನಿವೃತ್ತಿಯಾದವರಿಗೆ ಇಡುಗಂಟು ಮತ್ತು ₹10 ಸಾವಿರ ಮಾಸಿಕ ಪಿಂಚಣಿ ನೀಡಬೇಕು. ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ. ಮತ್ತು ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ತೆರೆಯಬೇಕು ಎಂದು ಒತ್ತಾಯಿಸಿದರು.ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ನೀಡಬೇಕು. ಮುಂಗಡವಾಗಿ ಕೋಳಿ ಮೊಟ್ಟೆ, ಬಾಡಿಗೆ, ಗ್ಯಾಸ್, ತರಕಾರಿಗಳಿಗೆ ಹಣ ನೀಡಬೇಕು. ಖಾಲಿಯಾದ ಹುದ್ದೆಗಳನ್ನು ಮೂರು ತಿಂಗಳೊಳಗೆ ನೇಮಕ ಮಾಡಬೇಕು. ಸಾಮೂಹಿಕ ಆರೋಗ್ಯ ವಿಮೆ ಜಾರಿಯಾಗಬೇಕು ಎಂಬ ಹಲವು ಬೇಡಿಕೆಗಳನ್ನು ಈಡೇರಿಸಿ ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಶೈಲಜಾ ಜಿ., ಪದಾಧಿಕಾರಿಗಳಾದ ಮಂಜುಳಾ, ಎಚ್. ಜಯಲಕ್ಷ್ಮಿ ನೇತೃತ್ವ ವಹಿಸಿದ್ದರು.