ಸಾರಾಂಶ
ಚಿಕ್ಕಮಗಳೂರು, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲಾ ವರ್ಗದವರಿಗೂ ಅನುಕೂಲವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದ್ದಾರೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲಾ ವರ್ಗದವರಿಗೂ ಅನುಕೂಲವಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಚಿತ ಆಹಾರ ಧಾನ್ಯ ವಿತರಣೆಯಲ್ಲಿ ರಾಜ್ಯದಲ್ಲೇ ಚಿಕ್ಕಮಗಳೂರು ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಶೇ. 97.26 ರಷ್ಟು ಸಾಧಿಸಿದೆ. ಇದುವರೆಗೆ ಜಿಲ್ಲೆಗೆ 152.78 ಕೋಟಿ ರು. ಗಳಷ್ಟು ಫಲಾನುಭವಿಗಳಿಗೆ ಹಣ ನೀಡಿದೆ ಎಂದ ಅವರು, ಪಡಿತರ ವಿತರಣಾ ವ್ಯವಸ್ಥೆ ಸಂಪೂರ್ಣವಾಗಿ ಗಣಕೀಕರಣದಡಿ ಪಡಿತರ ಚೀಟಿದಾರರ ಜೊತೆಗೆ ಪ್ರತಿ ಫಲಾನುಭವಿ ಗಳಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿ ಡಿಬಿಟಿ ಮುಖಾಂತರ ಹಣ ನೀಡಲಾಗಿದೆ ಎಂದು ಹೇಳಿದರು.ಮಹಿಳಾ ಸಬಲೀಕರಣಕ್ಕೆ ಉಚಿತ ಬಸ್ ಸೌಲಭ್ಯ ಕಲ್ಪಿಸುವ ಯೋಜನೆ ಕೋಟ್ಯಂತರ ಮಹಿಳೆಯರು ಸೌಲಭ್ಯ ಪಡೆಯುತ್ತಿ ದ್ದಾರೆ, ಎಲ್ಲಾ ವರ್ಗದ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ನಿಗಧಿತ ವಿದ್ಯುತ್ ಸೌಲಭ್ಯ ನೀಡುವ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಮಹತ್ವ ನೀಡಿದ ಜೊತೆಗೆ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಹಣಕಾಸು ವಿಚಾರದಲ್ಲಿ ಸ್ವಾಲಂಬಿಗಳಾಗಲಿ ಎಂಬ ಸದುದ್ದೇಶದಿಂದ ಜಾರಿಗೊಳಿಸಲಾಗಿದೆ. ಈ ಯೋಜನೆ ಜಿಲ್ಲೆಯಲ್ಲಿ ನೋಂದಾಯಿಸಿದ ಫಲಾನುಭವಿಗಳಲ್ಲಿ ಶೇ. 94.81 ರಷ್ಟು ಪ್ರಗತಿ ಸಾಧಿಸಿದೆ ಎಂದರು.ಯುವ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಅವರಿಗೆ ಯುವ ನಿಧಿ ಯೋಜನೆ ಮೂಲಕ ಈವರೆಗೂ 3812 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ ಎಂದ ಅವರು, ಪ್ರತಿ ಗ್ರಾಮಗಳಲ್ಲಿ ಅರ್ಹ ಫಲಾನುಭವಿಗಳಿದ್ದು, ಅನುಷ್ಠಾನ ಸಮಿತಿ ಎಲ್ಲ ಸದಸ್ಯರು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆಯಿಂದ ಫಲಾನುಭವಿಗಳನ್ನು ಗುರುತಿಸಿ ಅರ್ಹರಿಗೆ ಯೋಜನೆಗಳ ಪ್ರಯೋಜನ ನೀಡಲು ಮುಂದಾಗಬೇಕು ಎಂದು ಹೇಳಿದರು.ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಮಾತನಾಡಿ, ಅನುಷ್ಠಾನ ಸಮಿತಿ ಸದಸ್ಯ ಕೇಳಲಾದ ವಿವಿಧ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆ ವಿವಿಧ ಅಧಿಕಾರಿಗಳಿಂದ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲ ತಾಲೂಕು ಸಮಿತಿ ಕ್ರಿಯಾಶೀಲರಾಗಿ ಯೋಜನೆಗಳ ಮಾಹಿತಿ ಪಡೆದು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಹಾಗೂ ಇರುವ ತಾಂತ್ರಿಕ ಸಮಸ್ಯೆಯನ್ನು ಕೇಂದ್ರ ಸಮಿತಿ ಸಭೆ ಗಮನಕ್ಕೆ ತರಲು ಪ್ರಯತ್ನಿಸಲಾಗುವುದು ಎಂದ ಅವರು, ಹಂತ ಹಂತವಾಗಿ ಇರುವ ಕೆಲ ಸಮಸ್ಯೆಗಳನ್ನು ನಿವಾರಿಸಲು ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚಿಸಿ ಬಗೆಹರಿಸಲಾಗುವುದು ಎಂದರು.ಸಭೆಯಲ್ಲಿ ಉಪಾಧ್ಯಕ್ಷರಾದ ಎಚ್.ಎಸ್. ಕೃಷ್ಣೇಗೌಡ, ಚಂದ್ರವಳ್ಳಿ, ಮಲ್ಲೇಶ್, ರತ್ನಾಕರ್, ಮಹಮದ್, ಚಂದ್ರು, ಹೇಮವತಿ ಮಂಜಣ್ಣ, ಜೆಮ್ಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. 31 ಕೆಸಿಕೆಎಂ 2ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪ್ರಾಧಿಕಾರದ ಸದಸ್ಯ ಹಾಗೂ ಎಡಿಸಿ ನಾರಾಯಣರೆಡ್ಡಿ ಕನಕರೆಡ್ಡಿ ಉಪಸ್ಥಿತರಿದ್ದರು.