ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಫಲಾನುಭವಿಗಳ ಪರಿಷ್ಕರಣೆ ಹೊರತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಮೀಪದ ಗುರುದೇವರಹಳ್ಳಿ ಹಾಗೂ ಕಾಲೋನಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸುಮಾರು 40 ಲಕ್ಷ ರು. ವೆಚ್ಚದಲ್ಲಿ ಗ್ರಾಮ ಪರಿಮಿತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳು ಅನರ್ಹರ ಪಾಲಾಗುತ್ತಿರುವುದನ್ನು ತಡೆಯಲು, ಅರ್ಹರಿಗೆ ಯೋಜನೆಗಳನ್ನು ತಲುಪಿಸುವ ಉದ್ದೇಶದಿಂದ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದ ಅಭಿವೃದ್ಧಿಯನ್ನು ಸಹಿಸಲಾಗದೆ ವಿರೋಧ ಪಕ್ಷದವರು ಬಿಡದಿ ಟೌನ್ ಶಿಪ್ ಯೋಜನೆ ವಿಚಾರದಲ್ಲಿ ಆರೋಪಗಳನ್ನು ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ಆರೋಪಕ್ಕೆ ಅಭಿವೃದ್ಧಿ ಕೆಲಸಗಳ ಮೂಲಕ ಉತ್ತರಿಸಲಾಗುವುದು ಎಂದರು.


ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮದ್ದೂರು ಕ್ಷೇತ್ರದಲ್ಲಿ ಜನತೆ ನನ್ನ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನತೆ ಋಣ ತೀರಿಸುವ ನಿಟ್ಟಿನಲ್ಲಿ ಸುಮಾರು 2000 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ. ಇನ್ನುಳಿದ ಎರಡು ವರ್ಷಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಮಂಡ್ಯ ಜಿಲ್ಲೆಗೆ ಒಂದು ಮಂತ್ರಿ ಸ್ಥಾನ ಸಿಗುವುದು ಖಚಿತ. ಮತ್ತೊಂದು ಸ್ಥಾನ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿಗಳು ತೀರ್ಮಾನ ಮಾಡುತ್ತಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ 150ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆದ್ದು ರಾಜ್ಯದ ಮತ್ತಷ್ಟು ಪ್ರಗತಿಗೆ ಶ್ರಮಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದಿಂದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು. ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಎಸ್ಸಿ ವಿಭಾಗದ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಜಾಪ್ರಿಯ ವೆಂಕಟೇಶ್, ಲೋಕೋಪಯೋಗಿ ಇಲಾಖೆ ಎಇಇ ರಾಜೇಶ್, ಮುಖಂಡರಾದ ಅಪ್ಪಾಜಿಗೌಡ, ಗಿರೀಗೌಡ, ಮರಿಕಾಳ ಹೆಗ್ಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.