ಕೊಪ್ಪಳ ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜರುಗಿದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ನೇತೃತ್ವದಲ್ಲಿ ನಡೆಯಿತು.

ಕೊಪ್ಪಳ: ಗ್ಯಾರಂಟಿ ಯೋಜನೆಗಳು ಬಡವರ ಪಾಲಿನ ವರದಾನ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ ಹೇಳಿದರು.

ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜರುಗಿದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಕೋಟ್ಯಂತರ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಿವೆ. ಎಲ್ಲ ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಿ ಅರ್ಹರಿಗೆ ಯೋಜನೆಗಳ ಲಾಭ ತಲುಪಿಸಿ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಇದರಲ್ಲಿ ಜಿಲ್ಲೆಯು ನಿರೀಕ್ಷೆ ಮೀರಿದ ಕಾರ್ಯವನ್ನು ಮಾಡಿದ್ದು, ಅಧಿಕಾರಿಗಳ ಕಾರ್ಯ ಅಭಿನಂದನಾರ್ಹವಾಗಿದೆ. ಇತರ ಜಿಲ್ಲೆಗಳಿಗಿಂತ ಕೊಪ್ಪಳ ಜಿಲ್ಲೆ ಹೆಚ್ಚಿನ ಪ್ರಗತಿ ಸಾಧಿಸಿದೆ. ಅದರಂತೆ ಗೃಹಲಕ್ಷ್ಮೀ ಯೋಜನೆಯಲ್ಲಿ ಫಲಾನುಭವಿಯ ಮರಣದ ನಂತರ ಅವರ ಖಾತೆಗೆ ಜಮೆಯಾದ ಹಣವನ್ನು ಡ್ರಾ ಮಾಡಿದ್ದಲ್ಲಿ ಅವರ ವಾರಸುದಾರರು ಅಥವಾ ಕುಟುಂಬದವರಿಂದ ಅಂತಹ ಹಣವನ್ನು ಮರಳಿ ಸರ್ಕಾರಕ್ಕೆ ಮರುಪಾವತಿ ಮಾಡಲು ತಿಳಿಸಿ. ಭವಿಷ್ಯದಲ್ಲಿ ಇದು ಮರುಕಳಿಸದಂತೆ ಇಲಾಖಾ ಸಭೆ ನಡೆಸಿ ಸ್ಥಳೀಯ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಪಂಚಾಯಿತಿಗಳಿಗೆ ಮೃತ ಫಲಾನುಭವಿಯ ಮಾಹಿತಿಯನ್ನು ತಕ್ಷಣವೇ ನೀಡುವಂತೆ ಸೂಚಿಸಿ. ಮೃತರ ಖಾತೆಯನ್ನು ಸ್ಥಗಿತಗೊಳಿಸಿ ಹಾಗೂ ಇಲಾಖೆಯ ಫಲಾನುಭವಿ ಪಟ್ಟಿಯಿಂದ ಮೃತರ ಹೆಸರನ್ನು ರದ್ದುಪಡಿಸಿ ಎಂದು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಸುರಕ್ಷತೆಗೆ ಸಿಸಿ ಕ್ಯಾಮೆರಾ, ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಮಹಿಳೆಯರ ವಿಶ್ರಾಂತಿ ಹಾಗೂ ಅನುಕೂಲಕ್ಕಾಗಿ ಪ್ರತ್ಯೇಕ ಕೊಠಡಿಗಳನ್ನು ಒದಗಿಸಬೇಕು. ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಬೇಕು. ಅಗತ್ಯವಿರುವೆಡೆ ಪರಿಶೀಲನೆ ನಡೆಸಿ ಹೆಚ್ಚುವರಿ ಬಸ್‌ಗಳನ್ನು ಒದಗಿಸಬೇಕು ಎಂದು ಅವರು ಕೆಕೆಆರ್‌ಟಿಸಿ ಡಿಸಿ ಅವರಿಗೆ ಸೂಚಿಸಿದರು.

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಕಾರ್ಯದಲ್ಲಿ ಜಿಲ್ಲೆ ಶೇ. 86.18 ಪ್ರಗತಿ ಸಾಧಿಸಿದೆ. ಬಾಕಿ ಉಳಿದ ಪರಿಷ್ಕರಣೆ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಎಂದು ಅವರು ಹೇಳಿದರು.

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 15,804 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಹೆಚ್ಚಿನ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಿ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆಯಾಗಬೇಕು. ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುವ ದಾಸ್ತಾನಿನ ಮಾಹಿತಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ನ್ಯಾಯಬೆಲೆ ಅಂಗಡಿ ಪರವಾನಗಿ ನಿಯಮಾನುಸಾರ ನೀಡಬೇಕು. ಎಲ್ಲ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದನ್ವಯ ನಿಗದಿತ ಸಮಯದಲ್ಲಿ ಪಡಿತರದಾರರಿಗೆ ಪಡಿತರ ವಿತರಿಸಬೇಕು ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ಸ್ವಾಗತಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಪಂ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಟಿ., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಎಸ್.ಬಿ. ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಶರಣಪ್ಪ ಗಾಂಜಿ, ನಾಗರಾಜ ಅರಳಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಪೀರ್ ಸಾಬ್, ಬಾಲಚಂದ್ರ ಸ್ಯಾಮುವೆಲ್, ಶಕುಂತಲಾ ಬಿ.ಎಂ., ಆನಂದ ಹಾಸಲ್ಮರ, ವೆಂಕಟೇಶ ಬಾಬು ಇದ್ದರು.