ಕನ್ನಡಪ್ರಭ ವಾರ್ತೆ ಭದ್ರಾವತಿ

ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಮಂಗಳವಾರ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸಭೆಯನ್ನು ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.

ಪಂಚ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ. ಈ ನಡುವೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದೆ. ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕ್ಷೇತ್ರದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಬಿ.ಎಸ್ ಗಣೇಶ್ ಹೆಚ್ಚಿನ ಶ್ರಮವಹಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಬಿ.ಎಸ್ ಗಣೇಶ್ ಬೆಂಬಲಿಸುವಂತೆ ಮನವಿ ಮಾಡಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಬಗರ್‌ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್, ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ತಳ್ಳಿಕಟ್ಟೆ ಲೋಕೇಶ್, ಮುಖಂಡರಾದ ಧರ್ಮಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗಾಯಕರಿಂದ ಚಲನಚಿತ್ರ ಗೀತೆಗಳ ಗಾಯನ, ಪುಟಾಣಿ ಮಕ್ಕಳಿಂದ ದೇಶ ಭಕ್ತಿಗೀತೆಗೆ ನೃತ್ಯ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.