ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಎಚ್.ಎಂ.ರೇವಣ್ಣ

| Published : Oct 05 2025, 01:00 AM IST

ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಎಚ್.ಎಂ.ರೇವಣ್ಣ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜೊತೆಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದ್ದು, ಸರಿಯಾದ ರೀತಿಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಮುಳಬಾಗಿಲು

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು.

ಬೆಂಗಳೂರಿನಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬಡಬಗ್ಗರಿಗ ಐದು ಗ್ಯಾರಂಟಿ ಯೋಜನೆಗಳಿಂದ ಹಲವಾರು ರೀತಿಯ ಅನುಕೂಲಗಳಾಗುತ್ತಿದ್ದು, ಇದೇ ಮಾದರಿಯಲ್ಲಿ ಪಕ್ಕದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಸಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದರಿಂದ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜೊತೆಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದ್ದು, ಸರಿಯಾದ ರೀತಿಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಎಚ್ಚರಿಸಿದರು.

ಸರ್ಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ಪಡಿತರ ನೀಡದೆ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ನ್ಯಾಯಬೆಲೆ ಅಂಗಡಿ ಮಾಲೀಕರ ಲೈಸೆನ್ಸ್‌ನನ್ನು ಮುಲಾಜಿಲ್ಲದೆ ರದ್ದುಪಡಿಸುವುದಾಗಿ ತಿಳಿಸಿದರು.

ಆವನಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಎಂ.ಸಿ.ನೀಲಕಂಠೇಗೌಡರು ನಿಧನಗೊಂಡು ಆರು ತಿಂಗಳಾಗಿದ್ದು ಇದುವರೆಗೂ ಖಾಲಿ ಇರುವ ಆವಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತುಂಬಿಲ್ಲ ಎಂದು ಗ್ಯಾರಂಟಿ ಅಧ್ಯಕ್ಷರ ಗಮನ ಸೆಳೆದಾಗ ಈ ಸಂಬಂಧ ಡಿಸಿಸಿ ಅಧ್ಯಕ್ಷರು ಮತ್ತು ಮುಖಂಡರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಕೆಪಿಸಿಸಿ ಒಬಿಸಿ ಕಾರ್ಯದರ್ಶಿ ಚನ್ನಾಪುರ ಎನ್.ವೆಂಕಟೇಶ್ ಗೌಡ, ಟೌನ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮಾನುಲ್ಲಾ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಸುಬ್ರಮಣಿ, ಮುಖಂಡರಾದ ಕಾರ್ಗಿಲ್ ವೆಂಕಟೇಶ್, ಸಿದ್ದಗಟ್ಟ ಮುನಿಸ್ವಾಮಿಗೌಡ, ಕೋಳಿ ನಾಗರಾಜ್ ಇದ್ದರು.