ತೀವ್ರ ಬರಗಾಲದ ಸಂದರ್ಭದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ದೊಡ್ಡ ಆರ್ಥಿಕ ಆಸರೆಯಾಗಿವೆ. ಈ ಯೋಜನೆಗಳ ಸದುಪಯೋಗದ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು.
ನವಲಗುಂದ:
ತೀವ್ರ ಬರಗಾಲದ ಸಂದರ್ಭದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ದೊಡ್ಡ ಆರ್ಥಿಕ ಆಸರೆಯಾಗಿವೆ. ಈ ಯೋಜನೆಗಳ ಸದುಪಯೋಗದ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ಅಧಿಕಾರಿಗಳಿಗೆ ಕರೆ ನೀಡಿದರು.ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜರುಗಿದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ವೇಳೆ, ಅನುಪಾಲನಾ ವರದಿ (Compliance Report) ಸಲ್ಲಿಸದ ಶಿಶುಪಾಲನಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಮಿತಿಯ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸಭೆಯಲ್ಲಿಯೂ ಸದಸ್ಯರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದಿರುವ ಬಗ್ಗೆ ಸಭೆಯಲ್ಲಿ ಗಂಭೀರವಾಗಿ ಪ್ರಸ್ತಾಪಿಸಲಾಯಿತು.ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ, "ಎಲ್ಲಾ ಅಧಿಕಾರಿಗಳು ಸಭೆಯ ನಿಯಮಾವಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು. ಸಭೆಗೆ ಹಾಜರಾಗುವ ಮೊದಲೇ ಅನುಪಾಲನಾ ವರದಿಯನ್ನು ಸಲ್ಲಿಸುವುದು ಕಡ್ಡಾಯ. ಈ ಹಿಂದೆಯೂ ಸದಸ್ಯರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರೂ ಸಮರ್ಪಕ ಉತ್ತರ ನೀಡದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ಜಾರಿ ಮಾಡಬೇಕು " ಎಂದು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ವಿವಿಧ ಗ್ಯಾರಂಟಿ ಯೋಜನೆಗಳ ಕುರಿತು ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಲಾಯಿತು. ಶಕ್ತಿ ಯೋಜನೆಯಡಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಭಾಗದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ಗಳ ನಿಯೋಜನೆ ಮಾಡಬೇಕು. ಬೇಡಿಕೆಗೆ ಅನುಗುಣವಾಗಿ ಸಮಯ ನಿಗದಿಪಡಿಸಬೇಕು ಮತ್ತು ಹೆಚ್ಚು ಜನಸಂದಣಿ ಇರುವ ಅವಧಿಯಲ್ಲಿ ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದರು.ಗೃಹಜ್ಯೋತಿ ಯೋಜನೆಯ ಅರ್ಹ ಅರ್ಜಿದಾರರಿಗೆ ಯಾವುದೇ ವಿಳಂಬವಿಲ್ಲದೆ ತ್ವರಿತಗತಿಯಲ್ಲಿ ಸೌಲಭ್ಯ ತಲುಪಬೇಕು. ಅಲ್ಲದೆ, ಯುವನಿಧಿ ಯೋಜನೆ ಹಾಗೂ ಸೇತು ಪೋರ್ಟಲ್ ಕುರಿತು ಪದವಿ ಕಾಲೇಜು, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಂವಿಧಾನ ದಿನಾಚರಣೆ:ಸಭೆ ಆರಂಭವಾಗುವುದಕ್ಕೂ ಮುನ್ನ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ನಂದಿಪ್ರಸಾದ ಮುದ್ದೇಬಿಹಾಳ, ಗ್ಯಾರಂಟಿ ಸಮಿತಿ ಸದಸ್ಯರಾದ ಕಲ್ಲಪ್ಪ ತಲವಾಯಿ, ಆನಂದ ಜಕ್ಕನಗೌಡ್ರ, ಈರಣ್ಣ ಅಂಗಡಿ, ಮಲ್ಲಿಕಾರ್ಜುನ ಗುಜ್ಜಳ, ವಿಜಯ ಪೂಜಾರ, ಯಲ್ಲಪ್ಪ ಗಾಣಗೇರ, ಈರಣ್ಣ ಶಿಡಗಂಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.