ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಪಂಚ ಗ್ಯಾರಂಟಿ ಬಗ್ಗೆ ಹೊಸ ಅಪಡೇಟ್ : ಏನದು ?

| N/A | Published : Mar 18 2025, 12:37 AM IST / Updated: Mar 18 2025, 07:29 AM IST

Karnataka Chief Minister Siddaramaiah (File Photo/ANI)
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಪಂಚ ಗ್ಯಾರಂಟಿ ಬಗ್ಗೆ ಹೊಸ ಅಪಡೇಟ್ : ಏನದು ?
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬುದಾಗಿ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

 ವಿಧಾನಸಭೆ : ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬುದಾಗಿ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಿ, ಯೋಜನೆಯಲ್ಲಿ ತಪ್ಪುಗಳಿದ್ದರೆ ಅಥವಾ ಸರ್ಕಾರದ ಖಜಾನೆಗೆ ತೊಂದರೆಯಿದ್ದರೆ ಸರ್ಕಾರದ ಗಮನಕ್ಕೆ ತರುವುದು ಪ್ರತಿಪಕ್ಷಗಳ ಕೆಲಸ. ಪ್ರತಿಪಕ್ಷವು ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡಬಾರದು. ಯೋಜನೆಗಳ ಬಗ್ಗೆ ಸಕಾರಾತ್ಮಕ ಟೀಕೆಗಳನ್ನು ಮಾಡುವುದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದರು.

ಯೋಜನೆಗಳಲ್ಲಿ ಯಾವುದೇ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುವ ಬಿಜೆಪಿ ಅವುಗಳನ್ನೇ ಕಾಪಿ (ನಕಲು) ಮಾಡಿ ಲೋಕಸಭೆ ಚುನಾವಣೆ ವೇಳೆ ‘ಮೋದಿ ಕಿ ಗ್ಯಾರಂಟಿ’ ಎಂದು ನೀಡಿತು. ಅಲ್ಲದೇ, ಬಿಜೆಪಿ ಸರ್ಕಾರ ಇರುವ ರಾಜ್ಯದಲ್ಲಿಯೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿರುಗೇಟು ನೀಡಿದರು.

ಗ್ಯಾರಂಟಿ ಯೋಜನೆಗಳಿಗೆ ಫೆಬ್ರವರಿವರೆಗೆ ಸರ್ಕಾರ ಬರೋಬ್ಬರಿ 76,509 ಕೋಟಿ ರು.ನೀಡಿದೆ. ಜೂ.11, 2023 ರಿಂದ 410 ಕೋಟಿ ಜನರು ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದಾರೆ. 2024-25ಕ್ಕೆ 52 ಸಾವಿರ ಕೋಟಿ ರು.ಮೀಸಲಿಟ್ಟು, 41,509 ಕೋಟಿ ರು.ವೆಚ್ಚ ಮಾಡಿದ್ದೇವೆ. 1.26 ಕೋಟಿ ಕುಟುಂಬಗಳಿಗೆ ಯೋಜನೆಗಳು ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿರುವುದು ಮಾತ್ರವಲ್ಲದೇ, ಸ್ವಾಭಿಮಾನ ಹೆಚ್ಚುತ್ತಿದೆ. ಜನರ ಬದುಕು ಸುಧಾರಣೆಯಾಗಿದೆ. ಅವರಲ್ಲಿ ಸಮಾನತೆಯ ಭಾವ ಉಂಟಾಗುತ್ತಿದೆ. ಖಜಾನೆ ಖಾಲಿಯಾಗಿದೆ ಎಂಬ ಮಾತು ಸತ್ಯಕ್ಕೆ ದೂರವಾಗಿದೆ ಎಂದು ಅಂಕಿ-ಅಂಶಗಳ ಮೂಲಕ ಸಭೆಗೆ ಮಾಹಿತಿ ನೀಡಿದರು.

ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ (ಐಐಪಿಎ) ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಬಗ್ಗೆ ಪ್ರಶಂಸೆಯ ವರದಿ ನೀಡಿದ್ದಾರೆ. ಅಲ್ಲದೇ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ದು ಸರ್ಕಾರದ ಸಚಿವರು, ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಕುರಿತು ಅಧ್ಯಯನ ಮಾಡಿ ಹೋಗಿದ್ದಾರೆ. ಮಹಾರಾಷ್ಟ್ರದ ಸಾರಿಗೆ ಸಚಿವ ಪ್ರತಾಪ್ ಸರ್‍ನಾಯಕ್ ಅವರು ಶಕ್ತಿ ಯೋಜನೆ ಬಗ್ಗೆ ಚರ್ಚಿಸಿ ತೆರಳಿದ್ದಾರೆ. ಅಲ್ಲದೇ, ಕೇರಳದಿಂದ ಸಚಿವರು ಬಂದು ಅಧ್ಯಯನ ಮಾಡಿ ಹೋಗಿದ್ದಾರೆ. ಹೀಗಿದ್ದರೂ ಬಿಜೆಪಿ ಟೀಕಿಸಬೇಕು ಎನ್ನುವ ಕಾರಣಕ್ಕಾಗಿ ಟೀಕಿಸುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.  

ಬಿಜೆಪಿ ಜನಾಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ:

ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಆಪರೇಶನ್ ಕಮಲದಿಂದಲೇ ಹೊರತು ಜನಾದೇಶದಿಂದ ಅಲ್ಲ ಎಂದು ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು. ಬಿಜೆಪಿ ಎರಡು ಬಾರಿ ರಾಜ್ಯದಲ್ಲಿ ಅಧಿಕಾರ ನಡೆಸಿದರೂ ಜನಾಶೀರ್ವಾದಿಂದ ಅಧಿಕಾರ ನಡೆಸಿಲ್ಲ. ಆಪರೇಷನ್‌ ಕಮಲದ ಮೂಲಕ ಅಧಿಕಾರ ನಡೆಸಿದರು. ಬಿಜೆಪಿಯ ಟೀಕೆಗಳನ್ನು ಮೆಟ್ಟಿ ನಿಂತು ನಾವು ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಮೈತ್ರಿಕೂಟದ ಅಸ್ತಿತ್ವದಲ್ಲಿದ್ದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮೂರೂ ಕಡೆ ಪ್ರತಿಪಕ್ಷ ಮಕಾಡೆ ಮಲಗಿದೆ. ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ, ವಿಜಯೇಂದ್ರ ಅವರನ್ನು ಉದ್ದೇಶಿಸಿ, ನೀವು ಜಾತಿ ಉಪಯೋಗಿಸಿ ಅಧ್ಯಕ್ಷರಾಗಿದ್ದೀರಿ. ಯಡಿಯೂರಪ್ಪ ಅವರೂ ಜಾತಿ ಹೆಸರಲ್ಲಿ ಮುಖ್ಯಮಂತ್ರಿಯಾದರು. ಆದರೆ, ನಾವು ಎಲ್ಲಿಯೂ ಜಾತಿ ಉಪಯೋಗಿಸಿ ಕೆಲಸ ಮಾಡಿಲ್ಲ ಎಂದರು.