ಜನರು ಸ್ವಾವಲಂಬಿಯಾಗಿ ಬದುಕಲು ಗ್ಯಾರಂಟಿ ಸಹಕಾರಿ

| Published : Sep 16 2025, 12:03 AM IST

ಸಾರಾಂಶ

ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು.

ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಚ್.ಎಂ. ರೇವಣ್ಣ ಹೇಳಿಕೆ । ದೇಶದ ಇತರೆ ರಾಜ್ಯಗಳು ನಮ್ಮ ಗ್ಯಾರಂಟಿ ಮಾದರಿ ಅಳವಡಿಸಿಕೊಳ್ಳುತ್ತಿವೆ

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು.

ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸೋಮವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಡೀ ದೇಶಕ್ಕೆ ಮಾದರಿ ಹಾಗೂ ಜನಪರವಾಗಿರುವ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ ಜನರು ಸ್ವಾವಲಂಬಿಯಾಗಿ ಬದುಕಲು ಸರ್ಕಾರವು ಅನುವು ಮಾಡಿಕೊಟ್ಟಿದೆ. ಆರಂಭದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಇದ್ದ ಅನುಮಾನವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರ ಮೆಟ್ಟಿನಿಂತಿದೆ. ದೇಶದ ಇತರೆ ರಾಜ್ಯಗಳು ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಅಳವಡಿಸಿಕೊಳ್ಳುತ್ತಿವೆ. ಚಾಮರಾಜನಗರ ಜಿಲ್ಲೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿರುವುದು ಶ್ಲಾಘನೀಯವಾಗಿದೆ ಎಂದರು.

ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಶೋಷಿತರು, ಕಾರ್ಮಿಕರು, ಮಹಿಳೆಯರ ಪರವಾಗಿದ್ದು ಜನರ ಜೀವನಮಟ್ಟ ಸುಧಾರಣೆ ಕಾಣುತ್ತಿದೆ ಎಂದು ತಿಳಿಸಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರ್‌ನಾಥ್ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಶೋಷಿತರು, ಮಹಿಳೆಯರ ಸ್ವಾವಲಂಬನೆಯ ಕನಸು ಕಂಡಿದ್ದರು. ಅವರ ಆಶೋತ್ತರಗಳನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಮಾತನಾಡಿ, ರಾಜ್ಯದ ಜನರ ಆರ್ಥಿಕ ಸ್ಥಿತಿ ಉತ್ತಮಗೊಳಿಸಲು ಗ್ಯಾರಂಟಿ ಯೋಜನೆಗಳು ನೆರವಾಗಿವೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ ೫೦೦ ಕೋಟಿಗೂ ಹೆಚ್ಚು ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವುದು ದಾಖಲೆಯಾಗಿದೆ ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿಯೇ ಚಾಮರಾಜನಗರ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ವಿಶ್ವಗುರು ಬಸವಣ್ಣ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಗಣ್ಯರಿಗೆ ಪೂರ್ಣಕುಂಭ ಸ್ವಾಗತ ನೀಡಿ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರಕ್ಕೆ ಕರೆತರಲಾಯಿತು.

ಗ್ಯಾರಂಟಿ ಯೋಜನೆಗಳ ಲೋಗೊ ಬಿಡುಗಡೆ ಮಾಡಲಾಯಿತು. ಕಲೆ ನಟರಾಜು ಸಾಹಿತ್ಯದಲ್ಲಿ ಗಾಯಕ ಸಿ.ಎಂ. ನರಸಿಂಹಮೂರ್ತಿ ಹಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತ ಕರ್ನಾಟಕ ಸರ್ಕಾರ ಹರುಷ ತಂದಿತು, ಗ್ಯಾರಂಟಿ ಯೋಜನೆಯ ನಮಗೆ ನೀಡಿತು ಎಂಬ ವಿಡಿಯೋ ದೃಶ್ಯಾವಳಿಯನ್ನು ಎಚ್.ಎಂ. ರೇವಣ್ಣ ಬಿಡುಗಡೆ ಮಾಡಿದರು.

ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸೂರಜ್ ಹೆಗ್ಗಡೆ, ಗ್ರೇಟರ್ ಬೆಂಗಳೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಕೃಷ್ಣಪ್ಪ, ಅರುಣ್‌ಕುಮಾರ್, ಇತರೆ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಸಮಿತಿ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

-------------

5ಸಿಎಚ್ಎನ್‌19

ಚಾಮರಾಜನಗರದ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಕಾರ್ಯಗಾರವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಉದ್ಘಾಟಿಸಿದರು.