ಸಾರಾಂಶ
ಮರಿಯಮ್ಮನಹಳ್ಳಿ: ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿರುವ ನಾಡು ಕಂಡ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಬುಧವಾರ ಸಂಜೆ ರೋಡ್ ಶೋ ನಡೆಸಿ ನಾರಾಯಣದೇವರಕೆರೆ ವೃತ್ತದ ಬಳಿ ಮಾತನಾಡಿದರು.ಕಾಂಗ್ರೆಸ್‌ನಿಂದ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ. ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.
ಕಳೆದ 10 ವರ್ಷಗಳಿಂದ ದೇಶದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ. ಬರೀ ಸುಳ್ಳು ಹೇಳುತ್ತಾ ದಿನಗಳನ್ನು ಕಳೆದಿದ್ದಾರೆ. ಬಡಜನರ, ಮಧ್ಯಮ ವರ್ಗದ ಜನರ ಮತ್ತು ರೈತರ ಪರವಾಗಿ ಯಾವುದೇ ಒಂದು ಕೆಲಸ ಮಾಡಿಲ್ಲ. ಬರೀ ಶ್ರೀಮಂತರ ಪರವಾಗಿ ಮತ್ತು ಕಾರ್ಪೊರೇಟ್ ವಲಯದವರಿಗೆ ಲಾಭ ಮಾಡುವಂತೆ ಕೆಲಸ ಮಾಡಿದ್ದಾರೆ. ನರೇಂದ್ರ ಮೋದಿ ಬರೀ ಸುಳ್ಳು ಹೇಳುತ್ತಾ ಬಂದಿದ್ದಾರೆ. ಈಗ ಚುನಾವಣೆಯಲ್ಲಿ ಮತ್ತೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯವರ ಸುಳ್ಳು ಭರವಸೆಗಳಿಗೆ ಮೋಸ ಹೋಗಬಾರದು ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕಲ್ಯಾಣಕ್ಕಾಗಿ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ಬಡವರು, ದೀನ ದಲಿತರು, ಹೆಣ್ಣುಮಕ್ಕಳು ನೆಮ್ಮದಿಯ ಬದುಕು ಕಂಡುಕೊಂಡಿದ್ದಾರೆ. ಸಿದ್ದರಾಮಯ್ಯ ಬಡವರ ಪರ ಕಾಳಜಿ ಉಳ್ಳವರಾಗಿದ್ದಾರೆ. ಸಜ್ಜನ, ಪ್ರಾಮಾಣಿಕ ವ್ಯಕ್ತಿಯೆಂದು ಹೆಸರು ಪಡೆದಿರುವ ಸಂಸತ್ತಿನಲ್ಲಿ ಬಳ್ಳಾರಿ ಜನರ ಧ್ವನಿಯಾಗಬಲ್ಲ ಈ. ತುಕಾರಾಂ ಅವರಿಗೆ ಮತ ನೀಡಿ ಎಂದರು.
ಕೆಎಂಎಫ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್. ಭೀಮನಾಯ್ಕ ಮಾತನಾಡಿ, ಕೇಂದ್ರದ ಬಿಜೆಪಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಕೋಮು ಸೌಹಾರ್ದ ಹಾಳು ಮಾಡಿರುವ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು ಎಂದರು.ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ, ಕಂಪ್ಲಿ ಶಾಸಕ ಜಿ.ಎನ್. ಗಣೇಶ್, ಮಾಜಿ ಸಚಿವ ಎನ್.ಎಂ. ನಬಿಸಾಹೇಬ್
ರೋಡ್ ಶೋನಲ್ಲಿ ಭಾಗವಹಿಸಿದ್ದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಪಂ ಮಾಜಿ ಸದಸ್ಯ ಗೋವಿಂದರ ಪರಶುರಾಮ, ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಎನ್. ಸತ್ಯನಾರಾಯಣ, ಎನ್.ಎಸ್. ಬುಡೇನ್ ಸಾಹೇಬ್, ಪ್ರಚಾರ ಸಮಿತಿ ಅಧ್ಯಕ್ಷ ಸೋಮಪ್ಪ ಉಪ್ಪಾರ ಉಪಸ್ಥಿತರಿದ್ದರು.