ಜಿಲ್ಲೆಯಲ್ಲಿ ಪರೀಕ್ಷೆಗೆ 537 ವಿದ್ಯಾರ್ಥಿಗಳು ಹಾಜರು । ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ

ಕನ್ನಡಪ್ರಭ ವಾರ್ತೆ ಕಾರವಾರ

ನೀಟ್ ಮರು ಪರೀಕ್ಷೆಯು ಜೂ.21ರಂದು ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 537 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.


ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಆಗಮಿಸಲು ಬಸ್‌ಗಳ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಮಳೆ ಪ್ರಾರಂಭವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.

ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯಲ್ಲಿ ಯಾವುದೇ ಲೋಪಗಳು ಕಂಡುಬಾರದಂತೆ, ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಹಾಗೂ ವಿವಿಧ ಇಲಾಖೆಗಳು ಪರೀಕ್ಷೆಯ ಅವಧಿಯಲ್ಲಿ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನ ಪ್ರಾಂಶುಪಾಲೆ ಗೀತಾ ವಾಲೀಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಇದ್ದರು.