ಸಾರಾಂಶ
ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಹಾಕಲು ಮುಂದಾಗಿರುವ ಕ್ರಮ ಖಂಡಿಸಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಹೆದ್ದಾರಿ ತಡೆದು ದಿಕ್ಕಾರ ಮೊಳಗಿಸಿದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಹಾಕಲು ಮುಂದಾಗಿರುವ ಕ್ರಮ ಖಂಡಿಸಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಹೆದ್ದಾರಿ ತಡೆದು ದಿಕ್ಕಾರ ಮೊಳಗಿಸಿದರು.ಪಟ್ಟಣದ ಹಳೇ ಪ್ರವಾಸಿ ಮಂದಿರದಿಂದ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣದ ಮುಂದೆ ಹೆದ್ದಾರಿ ತಡೆದು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ನಂತರ ತಾಲೂಕು ಕಚೇರಿ ಮುಂದೆ ಜಮಾಯಿಸಿದ ರೈತಸಂಘದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಕೂಗಿದ ಬಳಿಕ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಸ್ಮಾರ್ಟ್ ಮೀಟರ್ ಹಾಕಲ್ಲ ಎಂದು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ತಡೆ ಹಿಡಿದಿದೆ, ಆದರೆ ಶಾಶ್ವತವಾಗಿ ರದ್ದು ಪಡಿಸಬೇಕು ಇಲ್ಲದಿದ್ದಲ್ಲಿ ರೈತಸಂಘ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರ ಖಾಸಗೀಕರಣ ಮಾಡಲು ಹೊರಟಿದೆ. ಕಾಂಗ್ರೆಸ್ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಮುಂದುವರಿಸಿದರೆ ನಿಮಗೆ ಉಳಿಗಾಲ ವಿಲ್ಲ. ರೈತಪರ ಕೆಲಸ ಮಾಡಿ ಎಂದು ಸಲಹೆ ನೀಡಿದರು. ನಂತರ ತಹಸೀಲ್ದಾರ್ ಹಾಗು ಸೆಸ್ಕಾಂ ಎಇಇ ಗೆ ರೈತರು ಒತ್ತಾಯ ಪತ್ರವನ್ನು ನೀಡಿದರು.ಪ್ರತಿಭಟನೆಯಲ್ಲಿ ರೈತಸಂಘದ ತಾಲೂಕು ಅಧ್ಯಕ್ಷ ಹಂಗಳ ದಿಲೀಪ್, ತಾಲೂಕು ಯುವ ಘಟಕದ ಅಧ್ಯಕ್ಷ ಭರತ್, ರೈತ ಸಂಘದ ಮುಖಂಡರಾದ ಶಿವಣ್ಣ, ಲೋಕೇಶ್, ನಾಗರಾಜಪ್ಪ, ರಘು, ರೂಪೇಶ್, ಮಹದೇವಪ್ಪ, ಮಹೇಂದ್ರ, ಮಂಜು, ನಾಗರಾಜು ಸೇರಿದಂತೆ ಹಲವರಿದ್ದರು.