ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗನಾನು ಈಗ ಯಾವುದೇ ಪಕ್ಷದಲ್ಲಿ ಇಲ್ಲ. ನಾನು ಸ್ವತಂತ್ರ್ಯ. ಹೀಗಾಗಿ ನಾನು ಯಾರ ಪರವಾಗಿ, ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ಇದರಂತೆ ಶಿವಮೊಗ್ಗದಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹಾಗೂ ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸ್ಪಷ್ಟನೆ ನೀಡಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಲವರು ಈ ಕುರಿತು ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಿಬಿಡಲಾಗುತ್ತಿದೆ ಎಂದರು. ಈಶ್ವರಪ್ಪ ಮತ್ತು ಗೋವಿಂದ ಕಾರಜೋಳ ಸಾಹೇಬರು ನನ್ನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇವರ ಜೊತೆ ನಾನು ಸಚಿವ ಸಂಪುಟದಲ್ಲಿ ಕೆಲಸ ಮಾಡಿದ್ದೇನೆ. ಸಾಕಷ್ಟು ಸಹಾಯ ಮಾಡಿದ್ದಾರೆ. ಇವರ ಮೇಲೆ ನನ್ನ ಋಣವಿದೆ. ಹೀಗಾಗಿ ನಾನು ಸ್ವಇಚ್ಚೆಯಿಂದ ಇವರಿಬ್ಬರ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಮಾಡುವ ನಿರ್ಧಾರಕ್ಕೆ ಬಂದಿದ್ದೇನೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ಮುನ್ನಡೆ ಸಾಧಿಸಿದ್ದಾರೆ. ಇಡೀ ಕ್ಷೇತ್ರದಲ್ಲಿ ಎಲ್ಲ ಕಡೆಯಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನಾನು ಬೈಂದೂರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಓಡಾಡಿದ್ದೇನೆ. ಶಿಕಾರಿಪುರ, ಶಿವಮೊಗ್ಗ ಗ್ರಾಮಾಂತರ, ಸೊರಬ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆಯಾಗಿ ಸುಮಾರು 1.30 ಲಕ್ಷ ಭೋವಿ ಜನಾಂಗದವರಿದ್ದು, ಇವರೆಲ್ಲರೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಾಭ ಪಡೆದವರೆಲ್ಲರೂ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ. ಈಶ್ವರಪ್ಪ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.ಚಿತ್ರದುರ್ಗದಲ್ಲಿ 2014ರಲ್ಲಿ ಜೆಡಿಎಸ್ ಟಿಕೆಟ್ ಮೇಲೆ ಸ್ಪರ್ಧಿಸಿ 2.14 ಲಕ್ಷ ಮತ ಗಳಿಸಿದ್ದೆ. ಇವುಗಳನ್ನು ಗೋವಿಂದ ಕಾರಜೋಳ ಅವರಿಗೆ ವರ್ಗಾಯಿಸುವ ಪ್ರಯತ್ನ ನಡೆಸಿದ್ದೇನೆ ಎಂದರು. ಗೋಷ್ಟಿಯಲ್ಲಿ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ಮತ್ತಿತರ ನಾಯಕರು ಉಪಸ್ಥಿತರಿದ್ದರು.