ಸಾರಾಂಶ
ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೌಲಭ್ಯಗಳನ್ನ ಕಲ್ಪಿಸಲಾಗಿದೆ.
ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ
ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬೇಕಾದರೆ ಸರ್ಕಾರಿ ಶಾಲೆಯಲ್ಲಿ ಓದಿದ ಹಳೆ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿದರೆ ಪೈಪೋಟಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶ್ ಹೇಳಿದರು.ತಾಲೂಕಿನ ಬೆಳಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1 ರಿಂದ 7ನೇ ತರಗತಿಯ 62 ವಿದ್ಯಾರ್ಥಿಗಳಿಗೆ ಬೆಂಗಳೂರಿನ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ವತಿಯಿಂದ ಸ್ಕೂಲ್ ಬ್ಯಾಗ್ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೌಲಭ್ಯಗಳನ್ನ ಕಲ್ಪಿಸಲಾಗಿದೆ. ಬಿಸಿಯೂಟ, ಕ್ಷೀರಭಾಗ್ಯ, ಬ್ಯಾಗ್ ವಿತರಣೆ ಸಮವಸ್ತ್ರ ವಿತರಣೆ, ಶೂ ವಿತರಣೆ ಸೇರಿದಂತೆ ಹತ್ತು ಹಲವು ಯೋಜನೆಗಳನ್ನ ರೂಪಿಸಿದೆಯಾದರೂ ಸಹ ಪೋಷಕರ ಖಾಸಗಿ ಶಾಲೆಯ ವ್ಯಾಮೋಹದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಯ ಕೊರತೆ ಎದ್ದು ಕಾಣುತ್ತಿದೆ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆಯಾದರೂ ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟಾಗ ಮಾತ್ರ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಲು ಸಹಾಯವಾಗುತ್ತದೆ, ಇದನ್ನೆಲ್ಲ ಮನಗಂಡು ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ತಿಳಿಸಿದರು.
ಸಂಸ್ಥೆಯ ಕೃಷ್ಣ ಸಾಯಿ, ಕಾರ್ತಿಕ್, ಆಶ್ಲೇಷ, ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಲಿಂಗೇಗೌಡ, ಸಿಆರ್.ಪಿ ಕೆಂಪರಾಜು, ಗ್ರಾಪಂ ಮಾಜಿ ಸದಸ್ಯ ಭುಜಂಗಪ್ಪ ಇದ್ದರು.