ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ನೂತನ ಅಧ್ಯಕ್ಷರಾಗಿ ಎಚ್.ಡಿ.ಪ್ರವೀಣ್ ಆಯ್ಕೆಯಾದರು. ಪಟ್ಟಣದ ಅಟಲ್ ಜೀ ಸಭಾಂಗಣದಲ್ಲಿ ಭಾನುವಾರ ರಾಜ್ಯ ಜೆಡಿಎಸ್ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.

ಸೋಮವಾರಪೇಟೆ : ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ನೂತನ ಅಧ್ಯಕ್ಷರಾಗಿ ಎಚ್.ಡಿ.ಪ್ರವೀಣ್ ಆಯ್ಕೆಯಾದರು. ಪಟ್ಟಣದ ಅಟಲ್ ಜೀ ಸಭಾಂಗಣದಲ್ಲಿ ಭಾನುವಾರ ರಾಜ್ಯ ಜೆಡಿಎಸ್ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ತಾಲೂಕು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಪಕ್ಷದಿಂದ ತಾಪಂ ಸದಸ್ಯರಾಗಿ, ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ಜಿಲ್ಲೆಯಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಸಿ.ಎಲ್.ವಿಶ್ವ ಅವರ ಹೆಸರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಮೊದಲಿಗೆ ಘೋಷಿಸಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಕಾರ್ಮಾಡ್ ಸುಬ್ಬಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಅವರನ್ನು ಮಾಜಿ ಸಚಿವ ಸಾ.ರಾ.ಮಹೇಶ್ ಘೋಷಿಸಿದರು.

ನಂತರ ಕೆಲವೇ ಕ್ಷಣಗಳಲ್ಲಿ ಪಕ್ಷದಲ್ಲಿ ಗೊಂದಲದಿಂದ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವುದು ಬೇಡ ಎಂಬ ಮಾತು ಕೇಳಿ ಬಂದ ಹಿನ್ನಲೆಯಲ್ಲಿ ಅಂತಿಮವಾಗಿ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಎಚ್.ಡಿ.ಪ್ರವೀಣ್ ಅವರ ಹೆಸರನ್ನು ಸ್ವತಃ ವಿಶ್ವ ಅವರೆ ಸೂಚಿಸಿದ ಮೇರೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ಘೋಷಣೆ ಮಾಡಿದರು. ನಂತರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಸಿ.ಎಲ್.ವಿಶ್ವ ಅವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಯಿತು.

ಸಭೆಯಲ್ಲೇ ಆಕ್ರೋಶ!:

ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರವೀಣ್ ಹೆಸರನ್ನು ಮಾಜಿ ಸಚಿವ ಸಾ.ರಾ. ಮಹೇಶ್ ಘೋಷಿಸುತ್ತಿದ್ದಂತೆ ಸಭೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹಾಗೂ ಜೆಡಿಎಸ್ ಉಸ್ತುವಾರಿ ಸಾ.ರಾ.ಮಹೇಶ್ ಅವರ ಎದುರೇ, ಕಾರ್ಯಕರ್ತರುಗಳ ಸಮ್ಮಖದಲ್ಲಿ ಪಕ್ಷದ ಮುಖಂಡ ಕಾಟ್ನಮನೆ ವಿಠಲ್ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾವು ಪಕ್ಷ ತ್ಯಜಿಸುವುದಾಗಿ ಕುಮಾರಸ್ವಾಮಿ ಅವರ ಎದುರೇ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡ ಬಗ್ಗನ ಅನಿಲ್ ಮಾತನಾಡಿ, ಕಳೆದ 15 ವರ್ಷಗಳಿಂದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿ ರಾಜ್ಯ ನಾಯಕರನ್ನು ಸಂಪರ್ಕಿಸಿ, ದೂರವಾಣಿ ಮೂಲಕ ಮಾತುಕತೆ ನಡೆಸಿ ಆಯ್ಕೆಯನ್ನು ಮಾಡಿಕೊಂಡು ಬರುತ್ತಿದ್ದರು. ಹೀಗಾಗಿ ಪಕ್ಷವನ್ನು ಸಧೃಡವಾಗಿ ಕಟ್ಟಲು ಸಾಧ್ಯವಾಗಿರಲಿಲ್ಲ. ಈ ಬಾರಿಯಾದರೂ ಅತೀ ಹೆಚ್ಚು ಜೆಡಿಎಸ್ ಕಾರ್ಯಕರ್ತರಿರುವ ಸೋಮವಾರಪೇಟೆ ತಾಲೂಕಿನ ಜೆಡಿಎಸ್ ಮುಖಂಡರೋರ್ವರನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂದು ಹೇಳಿದರು. ಈಗಾಗಲೇ ಕೇಂದ್ರ ಸಚಿವ ಕುಮಾರಸ್ವಾಮಿಯವರು ಕೊಡಗಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಭರವಸೆ ನೀಡಿದ್ದಾರೆ. ಅವರು ಭರವಸೆ ನೀಡಿದರೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಾರೆ ಎಂದು ಈ ಸಂದರ್ಭ ಹೇಳಿದರು.ಕೇಂದ್ರ ಸಚಿವ ಕುಮಾರಸ್ವಾಮಿ ಸಭೆಯಲ್ಲಿ ಮಾತನಾಡಿ, ಮುಂಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಒಗ್ಗೂಡಿ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದರು. ಅಲ್ಲದೇ ಪಕ್ಷವನ್ನು ಸದೃಢವಾಗಿ ಕಟ್ಟಲು ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಮಾಜಿ ಶಾಸಕ ಮಹಾದೇವ್, ತಾಲೂಕು ಅಧ್ಯಕ್ಷ ಸಿ.ಎಸ್.ನಾಗರಾಜ್, ಬಗ್ಗನ ಅನಿಲ್, ಸಿ.ಎಲ್.ವಿಶ್ವ, ಕಾರ್ಮಾಡ್ ಸುಬ್ಬಣ್ಣ, ಜಿ.ಬಿ.ಶಿವಪ್ಪ, ಸಂದೀಪ್, ಕಂಬಳ್ಳಿ ವಿಜಯ್ ಕುಮಾರ್, ವಿಜೇಶ್, ಜಯಾನಂದ ಮತ್ತಿತರರು ಇದ್ದರು.