ಮಂಡ್ಯ ಜಿಲ್ಲೆ ದೇವೇಗೌಡರ ಕುಟುಂಬಕ್ಕೆ ರಾಜಕೀಯ ಶಕ್ತಿ, ಪ್ರೀತಿ ಹಾಗೂ ಆಶೀರ್ವಾದ ನೀಡಿದೆ. ಕುಮಾರಸ್ವಾಮಿ ಅವರನ್ನು 3.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿದ ಜಿಲ್ಲೆಯ ಜನರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಎಲೆಚಾಕನಹಳ್ಳಿಯಲ್ಲಿ ಶ್ರೀಏಳೂರಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಶಂಕುಸ್ಥಾಪನೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಡವರು, ರೈತರು ಹಾಗೂ ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿ ಹೊಂದಿರುವ ನಾಯಕರು. 94 ವರ್ಷ ವಯಸ್ಸಿನಲ್ಲಿಯೂ ಜನರ ಸಮಸ್ಯೆಗಳ ಬಗ್ಗೆ ಚಿಂತಿಸುವ ಅವರ ಸೇವಾ ಮನೋಭಾವ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಮಂಡ್ಯ ಜಿಲ್ಲೆ ದೇವೇಗೌಡರ ಕುಟುಂಬಕ್ಕೆ ರಾಜಕೀಯ ಶಕ್ತಿ, ಪ್ರೀತಿ ಹಾಗೂ ಆಶೀರ್ವಾದ ನೀಡಿದೆ. ಕುಮಾರಸ್ವಾಮಿ ಅವರನ್ನು 3.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿದ ಜಿಲ್ಲೆಯ ಜನರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ರೈತರ ಸುಮಾರು 25 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದು, ಶಿಕ್ಷಣ, ವಿದ್ಯುತ್ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಹಲವು ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ತಮ್ಮ ಆಡಳಿತಾವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ತಾಲೂಕು ಕೇಂದ್ರಗಳಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾಗಿ ತಿಳಿಸಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದ್ದು, ಶಿಕ್ಷಣವೇ ಭವಿಷ್ಯ ರೂಪಿಸುವ ಶಕ್ತಿಯಾಗಿದೆ. ಆದ್ದರಿಂದ ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಮೈಸೂರು-ಬೆಂಗಳೂರು ರಸ್ತೆ ಅಭಿವೃದ್ಧಿ ಸಂದರ್ಭದಲ್ಲಿ ಭೂ-ಸ್ವಾಧೀನದಿಂದ ಮನೆ ಹಾಗೂ ಜಮೀನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ನಿಲುವು ಹೊಂದಿದ್ದೆ. ಯಾವುದೇ ಪಕ್ಷದವರಾಗಿರಲಿ, ಬಡವರಿಗೆ ಅನ್ಯಾಯವಾದಾಗ ಅವರ ಪರವಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದರು.

ಏಳೂರಮ್ಮ ದೇವಾಲಯ ನಿರ್ಮಾಣ ಕಾರ್ಯದಲ್ಲಿ ಗ್ರಾಮದ ಹಿರಿಯರು, ಮಹಿಳೆಯರು, ಯುವಕರು ಹಾಗೂ ಭಕ್ತರು ಒಗ್ಗಟ್ಟಿನಿಂದ ಕೈಜೋಡಿಸಬೇಕು. ದಾನಿಗಳು ಮತ್ತು ಗ್ರಾಮಸ್ಥರ ಸಹಭಾಗಿತ್ವದಲ್ಲಿ ದೇವಾಲಯವನ್ನು ಸುಂದರವಾಗಿ ನಿರ್ಮಿಸೋಣ. ದೇವಾಲಯದ ನಿರ್ಮಾಣಕ್ಕೆ ಅಗತ್ಯವಿರುವ ಸಹಕಾರವನ್ನು ತಮ್ಮ ಕೈಲಾದ ಮಟ್ಟಿಗೆ ನೀಡುವುದಾಗಿ ಭರವಸೆ ನೀಡಿದರು.

ರಾಜಕೀಯ ವಿಚಾರವಾಗಿ ಮಾತನಾಡಿದ ಅವರು, 2028ರ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬ ಗುರಿಯೊಂದಿಗೆ ಕಾರ್ಯಕರ್ತರು ಶ್ರಮಿಸಬೇಕು. ಜೆಡಿಎಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ರಾಜಕೀಯ ಭೇದ ಮರೆತು ಗ್ರಾಮದ ಅಭಿವೃದ್ಧಿ ಕಾರ್ಯಗಳಲ್ಲಿ ಸಹಕರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ, ಮುಖಂಡರಾದ ಮಹಾದೇವ, ಎಂ.ಮಾದೇಗೌಡ, ಚೆನ್ನೇಗೌಡ, ಪಾರ್ಥ ಸೇರಿದಂತೆ ಗ್ರಾಮದ ಹಿರಿಯರು, ಮಹಿಳೆಯರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ದಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.