ಬಸವಣ್ಣನವರು ಪ್ರತಿಪಾದಿಸಿದ ಕಾಯಕ, ದಾಸೋಹ ಹಾಗೂ ಸಮಾನತೆಯ ತತ್ವಗಳನ್ನು ಜನಸಾಮಾನ್ಯರಲ್ಲಿ ಪ್ರಸಾರ ಮಾಡುವ ಮೂಲಕ ಸಮಾಜ ಸುಧಾರಣೆಗೆ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಗ್ರೇಡ್-೨ ತಹಸೀಲ್ದಾರ್ ವಿ.ಎ. ಮುಳಗುಂದಮಠ ಹೇಳಿದರು.
ಶಿರಹಟ್ಟಿ: ೧೨ನೇ ಶತಮಾನದ ಶರಣ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದ ಹಡಪದ ಅಪ್ಪಣ್ಣರು ಬಸವಣ್ಣನವರ ಆಪ್ತ ಅನುಯಾಯಿಗಳಲ್ಲಿ ಒಬ್ಬರಾಗಿದ್ದರು. ಬಸವಣ್ಣನವರು ಪ್ರತಿಪಾದಿಸಿದ ಕಾಯಕ, ದಾಸೋಹ ಹಾಗೂ ಸಮಾನತೆಯ ತತ್ವಗಳನ್ನು ಜನಸಾಮಾನ್ಯರಲ್ಲಿ ಪ್ರಸಾರ ಮಾಡುವ ಮೂಲಕ ಸಮಾಜ ಸುಧಾರಣೆಗೆ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಗ್ರೇಡ್-೨ ತಹಸೀಲ್ದಾರ್ ವಿ.ಎ. ಮುಳಗುಂದಮಠ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾ ಭವನದಲ್ಲಿ ಹಡಪದ ಅಪ್ಪಣ್ಣ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಸಮಾಜ ಬಾಂಧವರೊಂದಿಗೆ ಪೂಜೆ ಸಲ್ಲಿಸಿ ಮಾತನಾಡಿದರು.ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಬಸವಣ್ಣನವರ ಮಾರ್ಗದರ್ಶನದಲ್ಲಿ ಶರಣ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಡಪದ ಅಪ್ಪಣ್ಣನವರು, ಜಾತಿ-ಮತ ಭೇದಗಳನ್ನು ವಿರೋಧಿಸಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಬಸವಣ್ಣನವರ ಕಾಯಕವೇ ಕೈಲಾಸ ತತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇತರರಿಗೂ ಮಾದರಿಯಾದರು ಎಂದು ತಿಳಿಸಿದರು.೧೨ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಉದಯವಾದ ಶರಣ ಚಳವಳಿಯು ಸಮಾಜದಲ್ಲಿದ್ದ ಅಜ್ಞಾನ, ಅಂಧಶ್ರದ್ಧೆ, ಜಾತಿ ವ್ಯವಸ್ಥೆ ಹಾಗೂ ಮೂಢನಂಬಿಕೆಗಳನ್ನು ನಿರ್ಮೂಲನೆ ಮಾಡುವ ಮಹತ್ತರ ಕಾರ್ಯವನ್ನು ಕೈಗೊಂಡಿತು. ಶರಣರು ದೇವರನ್ನು ಕಾಣಲು ದುಬಾರಿ ಯಜ್ಞ-ಯಾಗಗಳು ಅಥವಾ ಬಾಹ್ಯ ಆಡಂಬರಗಳ ಅಗತ್ಯವಿಲ್ಲ ಎಂದು ಸಾರಿದರು. ಸತ್ಯ, ಕಾಯಕ, ದಾಸೋಹ, ಸಮಾನತೆ ಮತ್ತು ಮಾನವೀಯ ಮೌಲ್ಯಗಳೇ ನಿಜವಾದ ಧರ್ಮ ಎಂದು ಜನರಲ್ಲಿ ಜಾಗೃತಿ ಮೂಡಿಸಿದರು ಎಂದು ಹೇಳಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ಧರಾಮ ಸೇರಿದಂತೆ ಅನೇಕ ಶರಣರು ತಮ್ಮ ವಚನಗಳ ಮೂಲಕ ಜನರಲ್ಲಿ ವೈಚಾರಿಕ ಚಿಂತನೆ ಬೆಳೆಸಿದರು ಎಂದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಣೆ
ಗದಗ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಬುಧವಾರ ಶ್ರೀಹಡಪದ ಅಪ್ಪಣ್ಣ ಜಯಂತಿಯನ್ನು ಅಪ್ಪಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು, ಹಿರಿಯರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.