ಸಾರಾಂಶ
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಹಳೇಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 35 ಮಂದಿಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ನೀಡಿ ಆದೇಶಿಸಿದೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸುಫ್ ಸವಣೂರು ತಿಳಿಸಿದ್ದಾರೆ.ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಹಾಗೂ ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಈ ಹಿಂದೆ 12 ಮಂದಿ ಅನಾರೋಗ್ಯ ಹಾಗೂ ಪರೀಕ್ಷೆ ಕಾರಣಗಳಿಂದ ಜಾಮೀನು ಪಡೆದಿದ್ದರು. ಇನ್ನುಳಿದವರು ಸಲ್ಲಿಸಿದ್ದ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ತಿರಸ್ಕೃತವಾಗಿತ್ತು. ಸುಪ್ರೀಂಕೋರ್ಟ್‌ನಲ್ಲಿ 35 ಮಂದಿ ಪರವಾಗಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅವರೆಲ್ಲರಿಗೂ ಈಗ ಜಾಮೀನು ಸಿಕಿದ್ದು, 4-5 ದಿನಗಳಲ್ಲಿ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಘಟನೆ ಏನು?:2022ರ ಏಪ್ರಿಲ್ 16ರಂದು ಯುವಕನೊಬ್ಬ ವಿವಾದಾತ್ಮಕ ವಾಟ್ಸ್‌ಆ್ಯಪ್ ವಿಡಿಯೊ ಸ್ಟೇಟಸ್ ಹಾಕಿದ್ದ ಹಿನ್ನೆಲೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಗಲಭೆ ಉಂಟಾಗಿತ್ತು. ಕೆಲವರು ಕಲ್ಲು ತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ್ದರು. ಹಲವು ಪೊಲೀಸ್ ಸಿಬ್ಬಂದಿಗೆ ಗಾಯಗೊಂಡಿದ್ದು, ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಈ ಬಗ್ಗೆ 12 ಪ್ರಕರಣಗಳು ದಾಖಲಾಗಿದ್ದವು. 1000ಕ್ಕೂ ಹೆಚ್ಚು ಮಂದಿಯನ್ನ ಪೊಲೀಸರು ವಿಚಾರಣೆಗೊಳಪಡಿಸಿ, 150ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ನ್ಯಾಯಾಲಯದಲ್ಲಿ ಹಳೇಹುಬ್ಬಳ್ಳಿ ಠಾಣೆ ಪೊಲೀಸರು ನಾಲ್ಕು ಸಾವಿರ ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಿಂದ ಕೆಲವು ಆರೋಪಿಗಳಿಗೆ ಜಾಮೀನು ದೊರೆತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.