ಬಿಜೆಪಿ, ಜೆಡಿಎಸ್ ಷಡ್ಯಂತ್ರ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ

| Published : Nov 06 2024, 11:46 PM IST / Updated: Nov 06 2024, 11:47 PM IST

ಬಿಜೆಪಿ, ಜೆಡಿಎಸ್ ಷಡ್ಯಂತ್ರ ಖಂಡಿಸಿ ಅರೆಬೆತ್ತಲೆ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜಭವನಗಳನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ.ಸಾಗರ್ ಬಣ) ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ ಡಿಎಸ್ಎಸ್ ಜಿಲ್ಲಾ ಸಮಿತಿ ಸಂಚಾಲಕ ಸಿ.ಎಂ.ಶಿವಣ್ಣ ಮಾತನಾಡಿ, ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಪ್ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಈ ಹೋರಾಟದ ತಾರ್ಕಿಕ ಅಂತ್ಯ ಯಾರ್ಯಾರ ಮನೆ ಬಾಗಿಲು ತಟ್ಟಬಹುದೆಂಬ ಕನಿಷ್ಠ ಸಾಮಾನ್ಯ ಜ್ಞಾನವಾದರೂ ಈ ನಾಯಕರಿಗಿದಿಯೇ? ಕೇಂದ್ರ ಬಿಜೆಪಿ ಸರ್ಕಾರ ಸಂವಿಧಾನಿಕ ಸಂಸ್ಥೆಗಳ ದುರುಪಯೋಗ ಪಡಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಸರ್ಕಾರ ದುರ್ಬಲಗೊಳಿಸಲು, ಮುಡಾ ಪ್ರಕರಣದಲ್ಲಿ ಚುನಾಯಿತ ಸರ್ಕಾರ ಪತನಗೊಳಿಸಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಷಡ್ಯಂತ್ರವನ್ನು‌ ಖಂಡಿಸಿದರು.ಎಫ್ಐಆರ್ ಆಗಿರುವ ಕಾರಣಕ್ಕೆ ರಾಜೀನಾಮೆ ನೀಡಬೇಕೆಂದು ಮಾನದಂಡ ನಿಗದಿಪಡಿಸಿದರೆ ಸಿದ್ದರಾಮಯ್ಯನವರು ಮಾತ್ರವಲ್ಲ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿನ ಕನಿಷ್ಠ 23-24 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಉನ್ನತ ಅಧಿಕಾರದಲ್ಲಿದ್ದು ರಾಜಧರ್ಮವನ್ನು ಮರೆತು ಜಾತಿ ಧರ್ಮದ ಹೆಸರಲ್ಲಿ ಜನಾಂಗೀಯ ಹತ್ಯೆಗಳನ್ನು ತಡೆಯಲು ಕೇಂದ್ರ ಸರ್ಕಾರ ವಿಫಲರಾಗಿದ್ದಾರೆ ಎಂದು ದೂರಿದರು. ಧರ್ಮದ ಹೆಸರಿನಲ್ಲಿ ರಕ್ತಪಾತ ನಡೆಸಿದವರನ್ನು ಸಮರ್ಥಿಸಿಕೊಂಡು ನ್ಯಾಯಾಲಯಗಳಿಂದ ಛೀಮಾರಿ ಹಾಕಿಸಿಕೊಂಡು ಬೇರೆ ಬೇರೆ ಪಕ್ಷದವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು, ಅಸಹಾಯಕರಿಗೆ, ದಲಿತರಿಗೆ, ಹಿಂದುಳಿದವರಿಗೆ ಅಲ್ಪಸಂಖ್ಯಾತರಿಗೆ, ಶಕ್ತಿ ತುಂಬುವ 5 ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಸಿದ್ದರಾಮಯ್ಯನವರ ನೈತಿಕತೆಯನ್ನು ಪ್ರಶ್ನಿಸುವುದು ವಿಪರ್ಯಾಸ.ಆದ್ದರಿಂದ ಸಿದ್ದರಾಮಯ್ಯನವರನ್ನು ರಾಜೀನಾಮೆ ಕೊಡಿ ಎಂದು ಕೇಳುವುದು ಬಿಜೆಪಿಯವರಿಗೆ ಯಾವುದೇ ನೈತಿಕ ಹಕ್ಕಿಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬಾರದು ಎಂದರು. ಪ್ರತಿಭಟನೆಯಲ್ಲಿ ಆಟೋ ಉಮೇಶ್, ಗೀಜರ್ ಮಂಜೇಶ್, ಶಿವಸ್ವಾಮಿ ಕೊತ್ತಲವಾಡಿ, ನಾರಾಯಣ್, ರವಿಕುಮಾರ್ ಇತರರು ಭಾಗವಹಿಸಿದ್ದರು.

.