ಕೇಂದ್ರ ಸರ್ಕಾರ ವಿರುದ್ಧ ರೈತರ ಅರೆಬೆತ್ತಲೆ ಪ್ರತಿಭಟನೆ

| Published : Feb 24 2024, 02:34 AM IST

ಸಾರಾಂಶ

ಪಂಜಾಬ್, ಹರಿಯಾಣ ಹಾಗೂ ದೆಹಲಿ ಗಡಿಗಳಲ್ಲಿ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಪಂಜಾಬ್, ಹರಿಯಾಣ ಹಾಗೂ ದೆಹಲಿ ಗಡಿಗಳಲ್ಲಿ ರೈತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ನಗರದಲ್ಲಿ ಅಣಕು ಶವಯಾತ್ರೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ನಗರದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾವಚಿತ್ರವುಳ್ಳ ಅಣಕು ಶವಯಾತ್ರೆಯೊಂದಿಗೆ ಭುವನೇಶ್ವರಿ ವೃತ್ತಕ್ಕೆ ತೆರಳಿ ಬೆಂಕಿ ಹಚ್ಚಲು ಯತ್ನಿಸಿದರು. ಸ್ಥಳದಲ್ಲಿದ್ದ ಪೊಲೀಸರು ಅಣಕು ಶವಯಾತ್ರೆ ವಶಕ್ಕೆ ಪಡೆದು ಬೆಂಕಿ ಹಚ್ಚುವುದನ್ನು ವಿಫಲಗೊಳಿಸಿದರು. ವೃತ್ತದಲ್ಲಿಯೇ ತಮ್ಮ ಬಟ್ಟೆಗಳನ್ನು ಬಿಚ್ಚಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅರೆಬೆತ್ತಲೆಯಾಗಿ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗಳಿಗೆ ಒತ್ತಾಯ ಪೂರ್ವಕ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು ದೇಶದ ರೈತರ ಪರವಾಗಿ ಹೋರಾಟ ಮಾಡುತ್ತಿರುವ ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಮತ್ತು ದೆಹಲಿ ಗಡಿ ಭಾಗದಲ್ಲಿ ರೈತರ ಮೇಲೆ ಕೇಂದ್ರ ಸರ್ಕಾರ ಪೊಲೀಸರ ಮೂಲಕ ದೌರ್ಜನ್ಯ ನಡೆಸುತ್ತಿದೆ. ಆ ಮೂಲಕ ಮಾನವ ಹಕ್ಕು ಧಮನ ಮಾಡಲು ಹೊರಟಿದೆ ಎಂದು ಆರೋಪಿಸಿದರು. ಚಳವಳಿ ಮಾಡಲು ದೆಹಲಿಗೆ ತೆರಳುತ್ತಿದ್ದ ರೈತರನ್ನು ದೆಹಲಿ ಗಡಿಭಾಗದಲ್ಲಿ ಉಗ್ರಗಾಮಿಗಳನ್ನು ನಿಗ್ರಹಿಸುವ ರೀತಿಯಲ್ಲಿ ರೈತರನ್ನು ಬಗ್ಗು ಬಡಿಯುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.ಪೊಲೀಸರ ದಾಳಿಯಿಂದ ರೈತರು ಸಾಯುತ್ತಿದ್ದು ಈ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕು. ಫಸಲ್ ಬಿಮಾ ಬೆಳೆ ಯೋಜನೆ ಪದ್ಧತಿ ಬದಲಾಗಿ ಪ್ರತಿ ರೈತನ ಹೊಲದ ಬೆಳೆ ವಿಮೆ ಜಾರಿಯಾಗಬೇಕು. ಕಳೆದ ಒಂದೂವರೆ ವರ್ಷ ಕಾಲ ದೆಹಲಿ ಗಡಿಯಲ್ಲಿ ಹೋರಾಟ ಮಾಡಿ ಪ್ರಾಣ ಳೆದುಕೊಂಡ ೭೫೦ ರೈತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಎಚ್ಚೆತ್ತುಕೊಂಡು ರೈತರ ಮೇಲಿನ ದೌರ್ಜನ್ಯ ನಿಲ್ಲಿಸದಿದ್ದರೆ ದೇಶಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ. ಎಲ್ಲ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ಜಾರಿಯಾಗಬೇಕು. ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು. ೬೦ ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಈ ಎಲ್ಲ ಒತ್ತಾಯಗಳ ಬಗ್ಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸುವ ತನಕ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್, ಪದಾಧಿಕಾರಿಗಳಾದ ಉಡಿಗಾಲ ರೇವಣ್ಣ, ಪಟೇಲ್ ಶಿವಮೂರ್ತಿ, ಮೂಕಹಳ್ಳಿ ಮಹದೇವಸ್ವಾಮಿ, ದೇವರಾಜು, ಕಿರಗಸೂರು ಶಂಕರ್, ಸತೀಶ್, ಸಿದ್ದೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.