ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘ, ಹಾಲುಗುಂದ ಗ್ರಾಮಸ್ಥರು, ಭಗವತಿ ಯೂತ್ ಕ್ಲಬ್ ಹಾಲುಗುಂದ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಡಿ.26ರಿಂದ 29ರ ವರೆಗೆ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ 7+2 ಜನರ ಮುಕ್ತ ಕಾಲ್ಚೆಂಡು ಪಂದ್ಯಾವಳಿ ನಡೆಯಲಿದೆ ಎಂದು ಹಾಲುಗುಂದ ಗ್ರಾಪಂ ಅಧ್ಯಕ್ಷ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಂದಿಕಂಡ ದಿನೇಶ್ (ಕುಶ) ಮಾಹಿತಿ ನೀಡಿದರು.ಹಾಲುಗುಂದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂದಿಕಂಡ ದಿನೇಶ್, ಹಾಲುಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ಹಳೆಯ ವಿದ್ಯಾರ್ಥಿ ಸಂಘವನ್ನು ಸ್ಥಾಪಿಸಿದ್ದೇವೆ. ಶಾಲೆಯ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ಶಾಲಾ ಶಿಕ್ಷಕರು ನಮ್ಮ ಗಮನಕ್ಕೆ ತಂದಿದ್ದರು. ತಕ್ಷಣ ಹಳೆಯ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ, ಶಾಲೆಯ ಅಭಿವೃದ್ಧಿಗಾಗಿ ಹಳೆಯ ವಿದ್ಯಾರ್ಥಿ ಸಂಘವನ್ನು ಸ್ಥಾಪಿಸಿದ್ದೇವೆ ಎಂದರು. ಡಿ.26ರಂದು ಬೆಳಗ್ಗೆ 10 ಗಂಟೆಗೆ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ, ಹಾಲುಗುಂದ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಹಾಲುಗುಂದ ಗ್ರಾಮದ ತಕ್ಕಮುಖ್ಯಸ್ಥರು ಭಾಗವಹಿಸಲಿದ್ದಾರೆ.
ಡಿ.28ರಂದು ಬೆಳಗ್ಗೆ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ನಡೆಯಲಿದ್ದು, ವಾರ್ಷಿಕೋತ್ಸವದ ಉದ್ಘಾಟನೆಯನ್ನು ಬಿ.ಇ.ಓ ಪ್ರಕಾಶ್ ಅವರು ನೆರವೇರಿಸಲಿದ್ದಾರೆ.ಡಿ.29ರಂದು ಮಧ್ಯಾಹ್ನ ಮೂರು ಗಂಟೆಗೆ ಫೈನಲ್ ಪಂದ್ಯ ನಡೆಯಲಿದ್ದು, ಫೈನಲ್ ಪಂದ್ಯದ ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯ ಸುಜಾಕುಶಾಲಪ್ಪ ಆಗಮಿಸಲಿದ್ದಾರೆ ಎಂದು ಪಂದಿಕಂಡ ದಿನೇಶ್ ಮಾಹಿತಿ ನೀಡಿದರು. ಸಮಾರೋಪ ಸಮಾರಂಭದಲ್ಲಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ, ಎಂ.ಎಲ್.ಸಿ ಸುಜಾಕುಶಾಲಪ್ಪ ಹಾಗೂ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿ, ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಹಾಲುಗುಂದ ಗ್ರಾಮದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಂದಿಕಂಡ ನಾಗೇಶ್ (ಈಶ್ವರ್) ಮಾತನಾಡಿ, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್‌ನಲ್ಲಿ ನೋಂದಣಿಗೊಂಡ 18 ತಂಡಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಜಿಲ್ಲಾ ಫುಟ್ಬಾಲ್ ಸಂಸ್ಥೆಯ, ರಾಷ್ಟ್ರಮಟ್ಟದ ಫುಟ್ಬಾಲ್ ತೀರ್ಪುಗಾರರು ಪಂದ್ಯಾವಳಿಯನ್ನು ನಿಯಂತ್ರಿಸಲಿದ್ದು, 7+2 ಆಟಗಾರರ ಪಂದ್ಯಾವಳಿಯಲ್ಲಿ ರೋಲಿಂಗ್ ಸಬ್ಸಿಟ್ಯೂಟ್ ಮಾಡಲು ಅವಕಾಶ ನೀಡಲಾಗಿದೆ.ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್‌ನಲ್ಲಿ ನೋಂದಣಿಯಾಗಿರುವ ಕ್ಲಬ್‌ಗಳಿಗೆ ಅವಕಾಶ ನೀಡಲಾಗಿದೆ. ಆದರೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ 40 ಸಾವಿರ ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 30 ಸಾವಿರ ನಗದು, ಆಕರ್ಷಕ ಟ್ರೋಫಿ ಮತ್ತು ವೈಯಕ್ತಿಕ ಬಹುಮಾನಗಳನ್ನು ನೀಡಲಿದ್ದೇವೆ ಎಂದು ನಾಗೇಶ್ (ಈಶ್ವರ್ )ಮಾಹಿತಿ ನೀಡಿದರು.ಫೈನಲ್ ಪಂದ್ಯಕ್ಕೂ ಮೊದಲು ಲಯನ್ಸ್ ಸಂಸ್ಥೆಯ ವಿದ್ಯಾರ್ಥಿನಿಯರು ಹಾಗೂ ವೈಷ್ಣವಿ ಫುಟ್ಬಾಲ್ ಕ್ಲಬ್ ಮಹಿಳಾ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಭಗವತಿ ಯೂತ್ ಕ್ಲಬ್ ಅಧ್ಯಕ್ಷ ಮಚ್ಚೆಟ್ಟೀರ ಮೋಹನ್ ಕಾರ್ಯಪ್ಪ, ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಮೇಕೇರಿರ ವಿಜಯ್, ಬೆಳೆಗಾರರಾದ ಚೆಯ್ಯಂಡ ಭರತ್ ಹಾಜರಿದ್ದರು.