ಗತವೈಭವ ಮರುಕಳಿಸುವಂತೆ ಹಂಪಿ ಉತ್ಸವ ಆಚರಣೆ: ಸಚಿವ ಜಮೀರ್

| Published : Jan 26 2024, 01:47 AM IST

ಸಾರಾಂಶ

ಈ ಬಾರಿ ಉತ್ಸವದಲ್ಲಿ ನಾಲ್ಕು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ.

ಹೊಸಪೇಟೆ: ವಿಜಯನಗರ ಸಾಮ್ರಾಜ್ಯದ ಗತವೈಭವ ಮರುಕಳಿಸುವ ಮಾದರಿಯಲ್ಲಿ ಹಂಪಿ ಉತ್ಸವ ಆಚರಿಸಲಾಗುವುದು. ಫೆ. ೨ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ಸವಕ್ಕೆ ಚಾಲನೆ ನೀಡಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟ ರವಿಚಂದ್ರನ್ ಸೇರಿದಂತೆ ಚಿತ್ರನಟರು ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.ಹಂಪಿಯಲ್ಲಿ ಗುರುವಾರ ಉತ್ಸವದ ವೇದಿಕೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉತ್ಸವದಲ್ಲಿ ನಾಲ್ಕು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ. ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡಲಾಗಿದೆ. ಈ ಉತ್ಸವವನ್ನು ಜನೋತ್ಸವವನ್ನಾಗಿಸಲು ಎಲ್ಲ ಕ್ರಮ ವಹಿಸಲಾಗಿದೆ ಎಂದರು.

ಈ ವರ್ಷ ಬರಗಾಲದ ಹಿನ್ನೆಲೆ ಹಂಪಿ ಉತ್ಸವ ಫೆಬ್ರವರಿ ೨,೩,೪ರಂದು ನಡೆಸಲಾಗುತ್ತಿದೆ. ಮುಂದಿನ ವರ್ಷದಿಂದ ಎಂ.ಪಿ. ಪ್ರಕಾಶ ಅವರ ಆಶಯದಂತೆ ನ. ೩,೪,೫ರಂದು ಆಚರಿಸಲಾಗುವುದು. ಬಜೆಟ್‌ನಲ್ಲೂ ಹಂಪಿ ಉತ್ಸವಕ್ಕೆ ಅನುದಾನ ಒದಗಿಸಲು ಕ್ರಮ ವಹಿಸಲಾಗುವುದು. ಈ ಬಾರಿ ₹೧೫ ಕೋಟಿಗೂ ಅಧಿಕ ವೆಚ್ಚದಲ್ಲಿ ಉತ್ಸವ ನಡೆಸಲಾಗುವುದು ಎಂದರು.

ಶಾಸಕರಾದ ಎಚ್.ಆರ್. ಗವಿಯಪ್ಪ, ಕೆ. ನೇಮರಾಜ್ ನಾಯ್ಕ, ಎಂ.ಪಿ. ಲತಾ, ಡಾ. ಎನ್.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಎಸ್ಪಿ ಶ್ರೀಹರಿಬಾಬು, ಜಿಪಂ ಸಿಇಒ ಸದಾಶಿವಪ್ರಭು ಮತ್ತಿತರರಿದ್ದರು.