ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಲೋಕಸಭಾ ಚುನಾವಣೆಗೆ ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಿಂದಲೆ ಕಹಳೆ ಮೊಳಗಿಸಿದ್ದಾರೆ.ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷ ಬಿಜೆಪಿ ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದೆ. ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಬಿಜೆಪಿ ಶಕ್ತಿ ಕೇಂದ್ರದಿಂದಲೇ ಚಾಲನೆ ನೀಡಿರುವುದು ಬಿಜೆಪಿ ವಲಯದಲ್ಲೂ ಸಂಚಲನ ಮೂಡಿಸಿದೆ.
ಬಿಜೆಪಿಗೆ ಯುವಜನತೆ ಬಲ ಹೆಚ್ಚಿದೆ. ಇದು ಕಳೆದ ಚುನಾವಣೆಗಳಲ್ಲಿ ಸಾಬೀತುಪಡಿಸಿದ್ದಾರೆ. ಇದೇ ಕಾರಣ ಈ ಬಾರಿ ಲೋಕಸಮರದಲ್ಲಿ ಯುವಜನತೆಯನ್ನು ತನ್ನತ್ತ ಸೆಳೆಯಲು ಕೈ ಪಡೆ ಮಾಸ್ಟರ್ ಪ್ಲಾನ್ ಮಾಡಿದ್ದು, ಇದಕ್ಕೆ ಯುವನಿಧಿಯನ್ನು ಅಸ್ತ್ರವಾಗಿ ಬಳಕೆ ಮಾಡಿಕೊಂಡಿದ್ದಂತಿದೆ.ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಟೀಕೆಗಳಿಗೆ ಕಾರ್ಯಕ್ರಮದಿಂದಲೇ ಉತ್ತರ ಕೊಡುತ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದರು. ಹೀಗಾಗಿ, ಯುವನಿಧಿ ಚಾಲನೆ ಕಾರ್ಯಕ್ರಮ ಅದ್ಧೂರಿ ಆಗಿರಬೇಕು ಎಂದು ವಾರಾನುಗಟ್ಟಲೆ ಶಿವಮೊಗ್ಗದಲ್ಲೇ ಠಿಕಾಣಿ ಹೂಡಿ ಕಾರ್ಯಕ್ರಮದಲ್ಲಿ ಸಣ್ಣ ಲೋಪವೂ ಆಗದಂತೆ ನೋಡಿಕೊಂಡಿದ್ದಾರೆ. ಈ ಯಶಸ್ಸಿನಿಂದ ಹಿಂದೆ ಇಬ್ಬರು ಸಚಿವರ ಪರಿಶ್ರಮವಿದೆ.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಶಿವಮೊಗ್ಗದಲ್ಲಿ ಬೀಡುಬಿಟ್ಟು ಅಧಿಕಾರಿಗಳ ಸರಣಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷಗಳನ್ನು ಸಿದ್ಧಪಡಿಸಿದ್ದರು. ಕಾಲಕಾಲಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದರು.ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ನಡೆಯುವ ಫ್ರೀಡಂ ಪಾರ್ಕ್‌ನಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆ ನಿರ್ಮಾಣದ ಹೊಣೆ ಹೊತ್ತಿದ್ದರು. ಮಲೆನಾಡು ಸೇರಿದಂತೆ ಮಧ್ಯ ಕರ್ನಾಟಕ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಪ್ಲಾನ್ ಹಾಕಿಕೊಂಡಿದ್ದ ಕಾಂಗ್ರೆಸ್ ನಾಯಕರು ಬೆಂಗಳೂರು ಬಿಟ್ಟು, ಶಿವಮೊಗ್ಗವನ್ನು ಆಯ್ಕೆ ಮಾಡಿಕೊಂಡು ಸಚಿವ ಮಧು ಬಂಗಾರಪ್ಪ ಅವರಿಗೆ ಉಸ್ತುವಾರಿ ವಹಿಸಿದ್ದರು.
ಹೊಗಳಿದ ಸಿಎಂ-ಡಿಸಿಎಂ:ಸರ್ಕಾರದ ಕೊನೆಯ ಗ್ಯಾರಂಟಿ ಯೋಜನೆ ಯುವನಿಧಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಯಶಸ್ವಿಯಾದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಡಿಹೊಗಳಿದರು.
- - - (ಫೋಟೋ: ಸಂಸತ್ ಭವನ)