ಹಂಗಳೂರಿನಲ್ಲಿ ಶನಿವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪುನೀತ್ (25) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಕನ್ನಡಪ್ರಭ ವಾರ್ತೆ ಕುಂದಾಪುರ
ನಗರದ ಹೊರವಲಯದ ಹಂಗಳೂರಿನಲ್ಲಿ ಶನಿವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪುನೀತ್ (25) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ.ಶನಿವಾರ ರಾತ್ರಿ ಹಂಗಳೂರು ನಗು ಪ್ಯಾಲೇಸ್ ಎದುರಿನ ಸರ್ವೀಸ್ ರಸ್ತೆಯಲ್ಲಿ ನಡೆದ ಎರಡು ಬೈಕುಗಳ ಮುಖಾಮುಖಿ ಡಿಕ್ಕಿಯಲ್ಲಿ ಒಂದು ಬೈಕಿನಲ್ಲಿದ್ದ ಸವಾರ ಮೃತಪಟ್ಟು, ಇನ್ನೊಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮಗ ಮತ್ತು ತಾಯಿ ಗಂಭೀರ ಸ್ಥಿತಿಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಬುಲೆಟ್ ಸವಾರ ಪುನೀತ್ ಮೃತಪಟ್ಟಿದ್ದಾರೆ. ಅವರ ತಾಯಿ ಪದ್ಮ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.ಮೂಲತಃ ಹಾಸನ ಜಿಲ್ಲೆಯವರಾದ ಪುನೀತ್, ಕಂಡ್ಲೂರಿನಲ್ಲಿ ಕಳೆದ ಕೆಲ ಸಮಯದಿಂದ ಬೇಕರಿಯೊಂದನ್ನು ನಡೆಸುತ್ತಿದ್ದು, ಕೋಟೇಶ್ವರದಲ್ಲಿನ ಸಂಬಂಧಿಕರ ಮನೆಗೆ ತಾಯಿಯನ್ನು ಬಿಡಲೆಂದು ಬುಲೆಟ್‌ನಲ್ಲಿ ಬರುತ್ತಿದ್ದಾಗ ದುರಂತ ಸಂಭವಿಸಿತ್ತು. ಮಣಿಪಾಲದ ಕೆಎಂಸಿಯಲ್ಲಿ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿ ವಾರಸುದಾರರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ.
ಕುಂದಾಪುರದ ಸಂಚಾರ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.