ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಭಾರಿ ಅಂತರದ ಗೆಲುವಿನಿಂದ ಸಂತಸ : ಮಾಜಿ ಶಾಸಕ ನರೇಂದ್ರ

| Published : Nov 24 2024, 01:47 AM IST / Updated: Nov 24 2024, 01:17 PM IST

ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಭಾರಿ ಅಂತರದ ಗೆಲುವಿನಿಂದ ಸಂತಸ : ಮಾಜಿ ಶಾಸಕ ನರೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭಾರಿ ಅಂತರದಿಂದ ಜಯಗಳಿಸಿರುವುದು ಸಂತೋಷ ತಂದಿದೆ ಎಂದು ಮಾಜಿ ಶಾಸಕ ನರೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂದೆ ಸಂಭ್ರಮಾಚರಣೆ ವೇಳೆ ಮಾತನಾಡಿದರು.

 ಹನೂರು : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭಾರಿ ಅಂತರದಿಂದ ಜಯಗಳಿಸಿರುವುದು ಸಂತೋಷ ತಂದಿದೆ ಎಂದು ಮಾಜಿ ಶಾಸಕ ನರೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಭಾಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿ ಅವರು ಮಾತನಾಡಿದರು.

ರಾಜ್ಯದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅಭೂತಪೂರ್ವ ಜಯಗಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗದವರು, ಶ್ರಮಿಕರ ಪರವಾಗಿ ಉತ್ತಮ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಡಳಿತವನ್ನು ರಾಜ್ಯದ ಜನತೆ ಮೆಚ್ಚಿ ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ನುಡಿದಂತೆ ನಡೆದ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್ನು ರಾಜ್ಯದ ಮೂರು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮತದಾರರು ಕಾತುರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿಯೇ ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲೇಬೇಕು ಎಂಬ ಹಠಕ್ಕೆ ಬಿದ್ದು ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್‍.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ಅಪಪ್ರಚಾರ ಮಾಡಿದರು. ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ಡಿ.ಕೆ.ಶಿವಕುಮಾರ್ ಸಹೋದರರ ವಿರುದ್ಧ ಇಲ್ಲದ ಸುಳ್ಳು ಆರೋಪಗಳನ್ನು ಮಾಡಿದರು. ಆದರೆ ಚನ್ನಪಟ್ಟಣದ ಜನತೆ ಆಧುನಿಕ ಭಗೀರಥ ಎಂದೆ ಹೆಸರು ಪಡೆದಿರುವ ಯೋಗೇಶ್ವರ್ ಅವರನ್ನು ಬೆಂಬಲಿಸುವ ಮೂಲಕ ಮೈತ್ರಿ ಪಕ್ಷದ ನಾಯಕರಿಗೆ ತಕ್ಕ ಪಾಠ ಕಲಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸುತ್ತಿದ್ದು ಮುಂದಿನ ಮೂರೂವರೆ ವರ್ಷಗಳಲ್ಲಿ ಚನ್ನಪಟ್ಟಣವನ್ನು ಯೋಗೇಶ್ವರ್ ಅವರು ಇನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸಲಿದ್ದಾರೆ ಎಂದು ತಿಳಿಸಿದರು.

ನಾನು ಸಹ ಚೆನ್ನಪಟ್ಟಣ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಯೋಗೇಶ್ವರ್ ಅವರ ಪ್ರಚಾರ ಮಾಡಿದ್ದೆ. ಈ ವೇಳೆಯೇ ಯೋಗೇಶ್ವರ್ ಅವರ ಗೆಲುವು ಖಚಿತವಾಗಿತ್ತು ಎಂದು ಸ್ಮರಿಸಿಕೊಂಡರು.

ಸಂಭ್ರಮಾಚರಣೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಗಿರೀಶ್, ಹರೀಶ್, ಸಂಪತ್, ಸುದೇಶ್, ಬಸವರಾಜು, ನವೀನ್ ಮಾಜಿ ಉಪಾಧ್ಯಕ್ಷ ಮಾದೇಶ್, ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ನಟರಾಜು, ಮುಖಂಡರಾದ ಮಾದೇಶ್, ಅಜ್ಜೀಪುರ ನಾಗರಾಜು, ರಾಜು, ರವಿ, ಇತರರು ಹಾಜರಿದ್ದರು.