ಸಾರಾಂಶ
ಕನ್ನಡಪ್ರಭ ವಾರ್ತೆ ದಾವಣಗೆರೆ
ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ, ಈ ಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಕೆ.ಎಸ್. ಬಸವಂತಪ್ಪ ಸೂಚನೆ ನೀಡಿದರು.ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ಚನ್ನಗಿರಿ ತಾಲೂಕಿನ ಹರಲಿಪುರ ಗ್ರಾಮಕ್ಕೆ ಭೇಟಿ ನೀಡಿದ ಅವರು, ₹18.50 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿ, ಮೂರು ವರ್ಷಗಳಿಂದ ನಿರ್ಮಿತಿ ಕೇಂದ್ರದಿಂದ ಪ್ರಾಥಮಿಕ ಆರೋಗ್ಯ ಉಪ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕಟ್ಟಡ ಬಹುತೇಕ ಪೂರ್ಣಗೊಂಡಿದ್ದು, ಅಲ್ಲಲ್ಲಿ ಕಳಪೆ ಕಾಮಗಾರಿ ಮಾಡಿರುವುದು ಕಂಡು ಬಂದಿದೆ. ಕೂಡಲೇ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ನಡೆಸಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕೆಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದ ಕಾರಣ ಈ ಭಾಗದ ಜನರಿಗೆ ಸಾಕಷ್ಟು ತೊಂದರೆ ಆಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ:ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದ ಶಾಸಕ ಕೆ.ಎಸ್.ಬಸವಂತಪ್ಪ, ಅಂಗನವಾಡಿ ಕೇಂದ್ರ ಹಳೆಯ ಕಟ್ಟಡವಾಗಿದೆ. ಶಾಸಕರ ನಿಧಿಯಡಿ ಅನುದಾನ ಬಿಡುಗಡೆ ಮಾಡಿ, ಹೊಸ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಿಸುವುದಾಗಿ ಭರವಸೆ ನೀಡಿದರು.
ಗ್ರಾಮದಲ್ಲಿ ದೊಡ್ಡ ಚರಂಡಿ ವ್ಯವಸ್ಥೆ ಇಲ್ಲದೇ ಮಳೆ ನೀರು ಧಾರಾಕಾರವಾಗಿ ಹರಿಯಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಜೋರಾಗಿ ಸುರಿದ ಮಳೆ ನೀರು ಗ್ರಾಮದ ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತ ಆಗುತ್ತದೆ. ದೊಡ್ಡ ಚರಂಡಿ ನಿರ್ಮಾಣ ಮಾಡಿದರೆ ನೀರು ಸರಾಗವಾಗಿ ಹರಿಯುತ್ತದೆ. ದೊಡ್ಡ ಚರಂಡಿ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ₹50 ಲಕ್ಷ ಅನುದಾನ ಬಿಡುಗಡೆ ಮಾಡಿ, ದೊಡ್ಡ ಚರಂಡಿ ನಿರ್ಮಾಣ ಮಾಡಿಸುವುದಾಗಿ ಶಾಸಕರು ಭರವಸೆ ನೀಡಿದರು.ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೀಮಾಕ್ಷಿ ರವಿ, ತಾಪಂ ಮಾಜಿ ಸದಸ್ಯ ಸತೀಶ್ ಪಟೇಲ್, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಗ್ರಾಮದ ಮುಖಂಡ ಶಿವಮೂರ್ತಿ, ನರ್ಸ್ ದಾಕ್ಷಾಯಣಮ್ಮ, ಶ್ರೀದೇವಿ, ಗ್ರಾಮಸ್ಥರು ಹಾಜರಿದ್ದರು.