ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯಲ್ಲಿನ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಹಂಗಾಮಿಗೆ ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಸರ್ಕಾರದ ಆದೇಶದಂತೆ ಕಬ್ಬು ನುರಿಸುವ ಕಾರ್ಯ ಆರಂಭಿಸಬೇಕು. ಬಸವೇಶ್ವರ ಸಕ್ಕರೆ ಕಾರ್ಖಾನೆ ಕಬ್ಬು ಒದಗಿಸಿದ ರೈತರಿಗೆ ಬಿಲ್ಲು ಪಾವತಿಯಲ್ಲಿ ವಿಳಂಬ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕಬ್ಬು ನುರಿಸುವುದು ಸೇರಿದಂತೆ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಬಸವೇಶ್ವರ ಸಕ್ಕರೆ ಕಾರ್ಖಾನೆಗೆ ಕಬ್ಬು ನುರಿಸುವುದು ತಡೆಹಿಡಿಯಲಾಗಿದೆ ಎಂದರು.
ಉಳಿದಂತೆ ಎಲ್ಲ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಆರಂಭಿಸಿ, ಕಬ್ಬು ಒದಗಿಸಿದ ರೈತರಿಗೆ ಯಾವುದೇ ವಿಳಂಬ ಮಾಡದೇ ನಿಗದಿತ ೧೪ ದಿನಗಳೊಳಗಾಗಿ ಬಿಲ್‌ನ್ನು ಪಾವತಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.ಕಬ್ಬು ನುರಿಸುವ ಮೊದಲು ಎಲ್ಲ ಸಕ್ಕರೆ ಕಾರ್ಖಾನೆಗಳು ತೂಕದ ಯಂತ್ರಗಳು ಡಿಜಿಟಲೀಕರಣಗೊಂಡಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಡಿಜಿಟಲೀಕರಣಗೊಳ್ಳದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನುರಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸ್ಟ್ಯಾಪಿಂಗ್ ಕಾರ್ಯ ಪೂರ್ಣಗೊಂಡಿರಬೇಕು. ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇರೆಗೆ ಕಟಾವು ಮಾಡಿ ನುರಿಸಬೇಕು. ಕೆಎಸ್‌ಪಿಸಿಬಿಯಿಂದ ನಿರ್ಧರಿತ ಕಾರ್ಖಾನೆ ನುರಿಸುವ ಸಾಮರ್ಥ್ಯಕ್ಕನುಗುಣವಾಗಿ ಮಾತ್ರ ಕಬ್ಬು ನುರಿಸಬೇಕು. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕಬ್ಬು ನುರಿಸದಂತೆ ಅವರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು. ಈ ಖಾತೆಯಿಂದಲೇ ಸಕ್ಕರೆ, ಮಾರಾಟ ವ್ಯವಹಾರ ನಿರ್ವಹಣೆಯಾಗಬೇಕು. ಈ ಕುರಿತು ಆಹಾರ ಮತ್ತು ನಾಗರಿಕರ ಸಬರಾಜು ಇಲಾಖೆ ಉಪನಿರ್ದೇಶಕರು ದೃಢೀಕರಣ ಮಾಡಬೇಕು ಎಂದು ಮಾಹಿತಿ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ, ರೈತರಿಗೆ ಬಿಲ್ ಪಾವತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ನಿಗದಿತ ಅವಧಿಯೊಳಗೆ ಬಿಲ್ ಪಾವತಿಗೆ ಕ್ರಮ ವಹಿಸಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬು ಸಾಗಾಣಿಕೆ ವಾಹನ ಚಾಲಕರಿಗೆ ಸೂಕ್ತ ತಿಳುವಳಿಕೆ ಮೂಡಿಸಬೇಕು. ಕಬ್ಬು ಸಾಗಾಣಿಕೆ ಮಾಡುವ ಪ್ರತಿಯೊಂದು ಟ್ರ್ಯಾಕ್ಟರ್ ಮತ್ತು ವಾಹನಗಳಿಗೆ ಕಡ್ಡಾಯವಾಗಿ ರಿಫ್ಲೆಕ್ಟರ್‌ಗಳನ್ನು ಅಳವಡಿಸಬೇಕು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಆಹಾರ ಮತ್ತು ನಾಗರಿಕರ ಸಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಆಹಾರ ಇಲಾಖೆ ಶಿರಸ್ತೇದಾರ ಅಮರೇಶ ತಾಂಡೂರ ಸೇರಿದಂತೆ ವಿವಿಧ ಅಧಿಕಾರಿಗಳು, ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.