ಹಾಸನಾಂಬ ಜಾತ್ರೆಯಲ್ಲಿ ಸೂಕ್ತ ರೀತಿ ವ್ಯವಸ್ಥೆ ಮಾಡಬೇಕು: ಜಿಲ್ಲಾಧಿಕಾರಿ ಸತ್ಯಭಾಮ

| Published : Oct 16 2024, 12:46 AM IST / Updated: Oct 16 2024, 12:47 AM IST

ಹಾಸನಾಂಬ ಜಾತ್ರೆಯಲ್ಲಿ ಸೂಕ್ತ ರೀತಿ ವ್ಯವಸ್ಥೆ ಮಾಡಬೇಕು: ಜಿಲ್ಲಾಧಿಕಾರಿ ಸತ್ಯಭಾಮ
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನಾಂಬ ದೇವಸ್ಥಾನದ ಬಾಗಿಲನ್ನು ಅ.೨೪ ರಂದು ತೆರೆಯಲಾಗುವುದು. ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನದಲ್ಲಿ ಹಾಸನಾಂಬ ಜಾತ್ರಾ ಮಹೋತ್ಸವ ಸಿದ್ಧತೆ ಸಭೆಯಲ್ಲಿ ಮಾತನಾಡಿದರು.

ಅಧಿಕಾರಿಗಳಿಗೆ ಸೂಚನೆ । 24ಕ್ಕೆ ತೆರೆಯಲಿರುವ ಹಾಸನಾಂಬ ದೇಗುಲ ಬಾಗಿಲು । ಉತ್ಸವ ಸಿದ್ಧತೆ ಸಭೆ

ಕನ್ನಡಪ್ರಭ ವಾರ್ತೆ ಹಾಸನ

ಹಾಸನಾಂಬ ದೇವಸ್ಥಾನದ ಬಾಗಿಲನ್ನು ಅ.೨೪ ರಂದು ತೆರೆಯಲಾಗುವುದು. ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಮೂಲಕ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ಸಿದ್ಧತೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಸಾರ್ವಜನಿಕರಿಗೆ ಅ.೨೪ ಮತ್ತು ನ.೩ ರಂದು ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದಂತೆ ಎಲ್ಲಾ ದಿನಗಳಲ್ಲೂ ವಾರದ 24 ಗಂಟೆ ದೇವಿ ದರ್ಶನಕ್ಕೆ ಅವಕಾಶ ಇರುತ್ತದೆ ಎಂದು ತಿಳಿಸಿದರು.

ವಿಶೇಷ ಚೇತನರಿಗೆ ವ್ಹೀಲ್ ಚೇರ್ ವ್ಯವಸ್ಥೆ ಇರುತ್ತದೆ. ಭಕ್ತಾದಿಗಳು ದೇವಿ ದರ್ಶನ ಪಡೆಯಲು ಅನುಕೂಲವಾಗುವಂತೆ ಮಧ್ಯದಲ್ಲಿ ಯಾವುದೇ ಅಡೆತಡೆಯಾಗದಂತೆ ಕ್ರಮವಹಿಸಲು ತಿಳಿಸಿದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಾರೆ. ದರ್ಶನಕ್ಕೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಜಾತ್ರಾ ಮಹೋತ್ಸವ ಸನಿಹದಲ್ಲಿಯೇ ಇದೆ. ಈಗಾಗಲೇ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದ್ದು, ಅತ್ಯಂತ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಲು ನಿರ್ದೇಶನ ನೀಡಿದರು. ಹಾಸನಾಂಬ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಸ್ವಚ್ಛತಾ ಕಾರ್ಯ ನಿರ್ವಹಿಸಲು ಸೂಚಿಸಿದರು.

ನಗರದ ಎಲ್ಲಾ ರಸ್ತೆಗಳ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಊರ ದೇವಿ ಜಾತ್ರಾ ಮಹೋತ್ಸವವು ಕಳೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ದೀಪಾಲಂಕಾರ ಮಾಡುವುದಕ್ಕೆ ಕ್ರಮಕೈಗೊಳ್ಳಬೇಕು. ಕಚೇರಿ ಒಳ ಮತ್ತು ಹೊರ ಆವರಣ ಸ್ವಚ್ಛತೆಗೆ ಕ್ರಮವಹಿಸಲು ಹೇಳಿದರು.

ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ಮತ್ತಿತರ ವ್ಯವಸ್ಥೆಗೆ ಕ್ರಮವಹಿಸುವುದರ ಜತೆಗೆ ಸ್ವಚ್ಛತಾ ಸಿಬ್ಬಂದಿ ಕಡ್ಡಾಯವಾಗಿ ಸ್ಥಳದಲ್ಲಿಯೇ ಇದ್ದು, ಶೌಚಾಲಯವನ್ನು ಆಗಿಂದಾಗ್ಗೆ ಸ್ವಚ್ಛಗೊಳಿಸಬೇಕು. ದೇವಿ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುವ ಸ್ಥಳ ಮತ್ತು ದೊನ್ನೆ ಪ್ರಸಾದ ವಿತರಣೆ ಸ್ಥಳದಲ್ಲಿಯೂ ಸ್ವಚ್ಛತೆಗೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೊಸ ಬಸ್ ನಿಲ್ದಾಣದಿಂದ ಹಾಸನಾಂಬ ದೇವಾಲಯಕ್ಕೆ ಭಕ್ತಾದಿಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಇರುತ್ತದೆ. ಹಾಸನಾಂಬ ಜಾತ್ರಾ ಮಹೋತ್ಸವದ ಹಿನ್ನೆಲೆ ಅ.೨೪ ರಂದು ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದ್ದು, ಪ್ರಥಮ ಬಹುಮಾನ ೧,೦೦,೦೦೦ ರು. ಹಾಗೂ ದ್ವಿತೀಯ ಬಹುಮಾನ ೫೦,೦೦೦ ರು. ನೀಡಲಾಗುವುದು. ಸಮೂಹ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ವಿಡಿಯೋಗಳನ್ನು ಮಾಡಿ ನಿಗದಿತ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕು ಇವುಗಳಲ್ಲಿ ಉತ್ತಮ ೧೬ ತಂಡಗಳನ್ನು ಆಯ್ಕೆ ಮಾಡಿ ಅ.೨೪ ರಂದು ನಗರದ ಹೇಮಾವತಿ ಪ್ರತಿಮೆ ಬಳಿ ಸಂಜೆ ೬ ಗಂಟೆಗೆ ಸ್ಪರ್ಧೆ ನಡೆಸಲಾಗುವುದು ಎಂದು ತಿಳಿಸಿದರು.

ಹಾಸನಾಂಬ ಜಾತ್ರಾ ಮಹೋತ್ಸವದ ಪ್ರಯುಕ್ತ ಅ.೨೬ ರಿಂದ ೨೯ರ ವರೆಗೆ ಫಲಪುಷ್ಪ ಪ್ರದರ್ಶನವನ್ನು ನಗರದ ಸಿಲ್ವರ್ ಜೂಬಿಲಿ ಪಾರ್ಕ್‌ನಲ್ಲಿ ಏರ್ಪಡಿಸಲಾಗಿದೆ. ಪ್ರತಿದಿನ ದೊನ್ನೆ ಪ್ರಸಾದ ಮತ್ತು ಸಿಬ್ಬಂದಿಗೆ ವ್ಯವಸ್ಥೆ ಮಾಡಿರುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಲು ಅಗತ್ಯಕ್ರಮ ವಹಿಸಲು ಸೂಚನೆ ನೀಡಿದರು. ಇಬ್ಬರು ವೈದ್ಯರು ಹಾಗೂ ಇಬ್ಬರು ನಸಿಂಗ್ ಸಿಬ್ಬಂದಿ ಪ್ರಥಮ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಔಷಧಿಗಳೊಂದಿಗೆ ಸುಸಜ್ಜಿತ ಆ್ಯಂಬುಲೆನ್ಸ್ ನಿಯೋಜನೆಗೆ ಕ್ರಮವಹಿಸಲು ಜಿಲ್ಲಾ ಸರ್ಜನ್‌ಗೆ ಸೂಚನೆ ನೀಡಿದರು.

ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಪ್ಯಾರಾ ಗ್ಲೈಂಡಿಂಗ್, ಪ್ಯಾರಾ ಮೋಟರಿಂಗ್ ಹಾಗೂ ಹಾಟ್ ಹೇರ್ ಬಲೂನ್ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.