ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಕ್ಷಣವನ್ನು ಹಾಸನದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಬೃಹತ್ ಎಲ್‌ಇಡಿ ಪರದೆ ಹಾಗೂ ಪ್ರೊಜೆಕ್ಟರ್ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು ಒಟ್ಟಾಗಿ ಕಾರ್ಯಕ್ರಮವನ್ನು ವೀಕ್ಷಿಸಿದರು.ಪ್ರಮಾಣವಚನ ಸ್ವೀಕಾರದ ನೇರ ಪ್ರಸಾರ ಆರಂಭವಾಗುತ್ತಿದ್ದಂತೆ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು. ಸಿಹಿ ಹಂಚಿ, ಪರಸ್ಪರ ಅಭಿನಂದನೆ ಸಲ್ಲಿಸಿ ಹಬ್ಬದ ವಾತಾವರಣ ನಿರ್ಮಿಸಿದರು. ನಗರದ ಪ್ರಮುಖ ರಸ್ತೆ, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್‌ಗಳು, ಬ್ಯಾನರ್‌ಗಳು ಮತ್ತು ಸ್ವಾಗತ ಫಲಕಗಳು ರಾರಾಜಿಸುತ್ತಿದ್ದು, ನಗರದೆಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ಎದ್ದು ಕಾಣುತ್ತಿತ್ತು.ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ, ಕರ್ನಾಟಕ ಕಂಡ ಅಪರೂಪದ ಹೋರಾಟಗಾರ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವುದು ರಾಜ್ಯದ ಜನತೆ ಹಾಗೂ ಕಾರ್ಯಕರ್ತರಿಗೆ ಸಂತಸದ ಕ್ಷಣವಾಗಿದೆ. ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸವಿದೆ ಎಂದರು. ಮುಂದಿನ ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದ್ದು, ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದೆ. ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಗಳಿಸಿ ಹೊಸ ರಾಜಕೀಯ ಇತಿಹಾಸ ನಿರ್ಮಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಹಾಸನ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಹಲವು ವರ್ಷಗಳ ಕನಸನ್ನು ಪ್ರಸ್ತಾಪಿಸಿದ ಅವರು, ಹಾಸನದಲ್ಲಿ ಐಟಿ ಕಂಪನಿಗಳು, ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳು ಹಾಗೂ ಐಟಿ ಹಬ್ ಸ್ಥಾಪನೆಯಾಗಬೇಕು. ಇದರಿಂದ ಜಿಲ್ಲೆಯ ಯುವಕರಿಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಈ ಕನಸು ನನಸಾಗುವ ನಿರೀಕ್ಷೆಯಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಅನು, ರಘು ದಾಸರಕೊಪ್ಪಲು, ಬೂದೇಶ್, ಆರೀಫ್, ವೆಂಕಟೇಗೌಡ, ತಂಬ್ಲಾಪುರ ಗಣೇಶ್, ಲವಕುಮಾರ್, ಅಶ್ರು ಸೇರಿದಂತೆ ಅನೇಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.