ಕರ್ನಾಟಕ ಸರಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ. ಸಂವಿಧಾನದಡಿ ನೀಡಿದ್ದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಶಿರಾ
ಕರ್ನಾಟಕ ಸರಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ. ಸಂವಿಧಾನದಡಿ ನೀಡಿದ್ದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಆರೋಪಿಸಿದರು.ಅವರು ಬುಧವಾರ ಶಿರಾ ನಗರ ಹಾಗೂ ಗ್ರಾಮಾಂತರ ಬಿಜೆಪಿ ವತಿಯಿಂದ ನಗರದ ಮಿನಿ ವಿಧಾನಸೌಧದ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಇದು, ಸರಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಆದ್ದರಿಂದ ಸರಕಾರ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ಜಾರಿ ಮಾಡಬಾರದು ಎಂದು ಒತ್ತಾಯಿಸಿದರು.
ಬಿಜೆಪಿ ಮಧುಗಿರಿ ವಿಭಾಗದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಇದು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರಿಗೆ ಮತ್ತು ಸರಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆಯಾಗಿದೆ. ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರಕಾರ ಪ್ರತಿಪಕ್ಷಗಳು, ಮಾಧ್ಯಮದವರ ಮೇಲೆ ನಿಯಂತ್ರಣ ಹೇರುವುದು, ಹೆದರಿಸುವ ಕೆಲಸವನ್ನು ಮಾಡುತ್ತಿದೆ. ಬಿಜೆಪಿ, ನಮ್ಮ ಸಂಘ ಸಂಸ್ಥೆ, ಕನ್ನಡ ಸಂಘಟನೆಗಳನ್ನು ದಮನ ಮಾಡಲು ಸರಕಾರ ಹೊರಟಿದೆ. ಆದ್ದರಿಂದ ವಿಧೇಯಕ ಹಿಂಪಡೆಯಿರಿ ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಎಂಜಲಗೆರೆ ಮೂರ್ತಿ, ಓಬಿಸಿ ಘಟಕದ ಅಧ್ಯಕ್ಷ ಮಾಗೋಡು ಪ್ರತಾಪ್, ಜಿಲ್ಲಾ ಉಪಾಧ್ಯಕ್ಷ ಹೊನ್ನಗೊಂಡನಹಳ್ಳಿ ಮೂರ್ತಿ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಈರಣ್ಣ ಪಟೇಲ್, ನಗರ ಅಧ್ಯಕ್ಷ ಗಿರಿಧರ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಮು ಮೂಗನಹಳ್ಳಿ, ಎಸ್ಟಿ. ಮೋರ್ಚಾ ಅಧ್ಯಕ್ಷ ತೇಜೇಶ್ವರ್, ಜಿಲ್ಲಾ ಕಾರ್ಯದರ್ಶಿ ಗೋಪಿಕುಂಟೆ ಕುಮಾರ್ ಮೇಷ್ಟ್ರು, ನಗರಸಭಾ ಸದಸ್ಯ ರಂಗರಾಜು, ಗ್ರಾಮ ಪಂಚಾಯತಿ ಸದಸ್ಯರಾದ ಎಂ ಶಿವಲಿಂಗಯ್ಯ, ಬೊಪ್ಪರಾಯಪ್ಪ, ತಾಲೂಕು ಉಪಾಧ್ಯಕ್ಷರಾದ ನಾಗರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಮದ್ದಕ್ಕನಹಳ್ಳಿ ರಂಗನಾಥ್, ಮಹಿಳಾ ಮೋರ್ಚಾ ನಾಗರತ್ನಮ್ಮ, ಮುಖಂಡರಾದ ಸಂತೇಪೇಟೆ ನಟರಾಜ್, ಹನುಮಂತನಾಯ್ಕ, ಮುರುಳಿ, ಕರಿಯಣ್ಣ, ಈರಣ್ಣ, ಬಾಂಬೇ ನಾಗಣ್ಣ ಸೇರಿದಂತೆ ಹಲವರು ಹಾಜರಿದ್ದರು.