ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕ್ಷೀಣಿಸಿದ್ದು, ಮುಖ್ಯ ಶಿಕ್ಷಕರು ಹಾಗೂ ಪ್ರಾಂಶುಪಾಲರು ಇದರ ಜವಾಬ್ದಾರಿ ಹೊರಬೇಕು. ಜತೆಗೆ ದಾಖಲಾತಿ ಸಂಖ್ಯೆ ಕ್ಷೀಣಿಸದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ಎಚ್. ಡಿ. ರೇವಣ್ಣ ತಿಳಿಸಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದ ಸರ್ಕಾರಿ ಶಾಲಾ ಕಾಲೇಜುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ತಾಲೂಕಿನ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ತಾಲೂಕಿನ ೨೬ ಸಿಆರ್‌ಪಿ, ಸಿಇಒ ಹಾಗೂ ಅನುಷ್ಠನಾ ಅಧಿಕಾರಿಗಳು ಈ ಬಗ್ಗೆ ಜಾಗ್ರತೆ ವಹಿಸಬೇಕು ಎಂದರು. ತಾಲೂಕಿನಲ್ಲಿ ಇರುವ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾತಿ ಕೊರತೆಯಿಂದ ಯಾವುದೇ ಸರ್ಕಾರಿ ವಿದ್ಯಾಸಂಸ್ಥೆಯನ್ನು ಮುಚ್ಚಬಾರದು. ಬದಲಾಗಿ ಮಕ್ಕಳ ದಾಖಲಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಬಿಇಒ, ಸಿಆರ್‌ಪಿ, ಬಿಆರ್‌ಪಿಗಳಿಗೆ ಸಲಹೆ ನೀಡಿದರು ಜತೆಗೆ ಖಾಸಗಿ ಶಾಲೆಗೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿವೆ. ಅಧಿಕಾರಿಗಳು ಇಂತಹ ಪರಿಸ್ಥಿತಿ ಬಾರದಂತೆ ಎಚ್ಚರ ವಹಿಸಬೇಕು ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸೇರುವಂತೆ ಪ್ರೌಢಶಾಲಾ ಮಕ್ಕಳ ಮನವೊಲಿಸಿದ ಬಳಿಕ ಅದನ್ನು ಪಾಲಕರ ಗಮನಕ್ಕೆ ತಂದು ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಮೌಲ್ಯಯುತ ಶಿಕ್ಷಣ ಹಾಗೂ ಸೌಲಭ್ಯಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.ಸರ್ಕಾರಕ್ಕೆ ಬಡ ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ಇಲ್ಲ. ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಜತೆಗೆ ಎಲ್ಲ ರೀತಿಯ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಖಾಲಿಯಿರುವ ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿ ಶಾಲೆ- ಕಾಲೇಜಿಗೆ ಬೇಕಾದ ಸೌಕರ್ಯ, ಖಾಲಿ ಹುದ್ದೆ ಭರ್ತಿ, ಕಟ್ಟಡಗಳ ರಿಪೇರಿ ಕುರಿತು ಎಲ್ಲರಿಂದ ಮಾಹಿತಿ ಪಡೆದರಲ್ಲದೆ, ತಮಗೆ ಬರುವ ಅನುದಾನದಲ್ಲಿ ಮಾಡಿಸಿ ಕೊಡಲಾಗುವುದು ಎಂದರು. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ಮೂಲಕ ಯಾವುದೇ ಶಾಲಾ-ಕಾಲೇಜುಗಳನ್ನು ಮುಚ್ಚದಂತೆ ಕ್ರಮಕೈಗೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಪಿ.ಗಂಗಾಧರ್‌ಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸಭೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಸ್. ಆರ್. ಮೂರ್ತಿ, ಗೃಹ ವಿಜ್ಞಾನ ಕಾಲೇಜು ಪ್ರಾಂಶುಪಾಲರಾದ ಆಶಾ ಜ್ಯೋತಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಾ ಬಿ. ಆರ್. ದೇವರಾಜ್, ಟಿ. ಎಸ್ ಕುಮಾರಸ್ವಾಮಿ ಹಾಗೂ ಪ್ರಾಣೇಶ್ ರಾವ್, ಪ್ರಾಧ್ಯಾಪಕ ಕೃಷ್ಣಮೂರ್ತಿ ಇತರರಿದ್ದರು..