ಸಾರಾಂಶ
-ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡುರಾವ್ ಕರೆ
ಕನ್ನಡಪ್ರಭ ವಾರ್ತೆ ತುಮಕೂರುಆರೋಗ್ಯ ಕರ್ನಾಟಕ ಅಭಿಯಾನದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಈ ಕಾರ್ಯಾಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ನಮ್ಮ ಇಲಾಖೆ ಗೃಹ ಆರೋಗ್ಯ ಎಂಬ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮ ರೂಪಿಸಲು ಚಿಂತನೆ ನಡೆಸಿದ್ದು, ತುಮಕೂರು ಜಿಲ್ಲೆಯಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಗೃಹ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.
ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಸ್ತಾನು ಇಲ್ಲದ ಔಷಧಿಗಳನ್ನು ವೈದ್ಯರು ರೋಗಿಗಳ ಔಷಧಿ ಚೀಟಿಗಳಲ್ಲಿ ಬರೆಯಬಾರದು, ಸರ್ಕಾರಿ ಆಸ್ಪತ್ರೆಗಳಿಗೆ ಬರುವವರು ಬಡವರಾಗಿರುತ್ತಾರೆ, ಅಂತಹವರಿಗೆ ನೆರವಾಗುವುದು ನಮ್ಮ ಕರ್ತವ್ಯ ಎಂದರು.ಆಸ್ಪತ್ರೆಗಳಲ್ಲಿ ದಾಸ್ತಾನು ಇರಬೇಕಾದ ಔಷಧಿಗಳನ್ನು ಪರಿಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಹಿಂದಿನ ಕಾಲದಲ್ಲಿ ಸಾಂಕ್ರಾಮಿಕ ರೋಗಗಳಿಂದ ಹೆಚ್ಚಾಗಿ ಮರಣ ಹೊಂದುತ್ತಿದ್ದರು. ಆದರೆ ಇಂದು ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈ ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲಿ ಇರುವಾಗಲೇ ತೋರಿಸಿಕೊಂಡರೆ, ಗುಣಮುಖರಾಗಬಹುದು ಎಂದು ಸಚಿವರು ಹೇಳಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೃಹಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್, ಪಂಚವಾರ್ಷಿಕ ಯೋಜನೆಯಲ್ಲಿ ಯಾವ ಕ್ಷೇತ್ರಕ್ಕೆ ಹೆಚ್ಚಿನ ಪ್ರಾತಿನಿಧ್ಯ ಕೊಟ್ಟರೆ ಈ ದೇಶದ ಜನಸಮುದಾಯಕ್ಕೆ ಅನುಕೂಲವಾಗುತ್ತದೆ ಎಂಬ ಅಂಶವನ್ನು ತಿಳಿದು ಮೊದಲನೇ ಪಂಚವರ್ಷಿನಕ ಯೋಜನೆಯಲ್ಲಿ ಆರೋಗ್ಯ, ಶಿಕ್ಷಣ, ಕೈಗಾರಿಕೆ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಅನುಷ್ಠಾನ ಮಾಡುವುದರ ಮೂಲಕ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಯಿತು ಎಂದು ಹೇಳಿದರು.
ನಮ್ಮ ದೇಶದ ಶೈಕ್ಷಣಿಕ ಕ್ಷೇತ್ರ ಇಂದು ತುಂಬಾ ಬದಲಾಗಿದೆ. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ನಮ್ಮ ದೇಶದ ಸಾಕ್ಷರತಾ ಪ್ರಮಾಣ ಶೇಕಡಾ 12 ರಷ್ಟಿತ್ತು, ಆದರೆ ಇಂದು ಶೇ.80 ರಷ್ಟು ಜನ ಸಾಕ್ಷರತಾರಾಗಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಕುಷ್ಠ ರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಯಿತು. ಪೋಲಿಯೋ ಈ ದೇಶದಲ್ಲಿ ಇರಲೇ ಬಾರದು ಎಂಬ ಕಾರ್ಯಕ್ರಮ ಕೊಟ್ಟರು. ಸಂಪೂರ್ಣವಾಗಿ ಇಡೀ ದೇಶದಲ್ಲಿ ಪೋಲಿಯೋ ಕಾಯಿಲೆ ಹೋಗಲಾಡಿಸುವ ಕಾರ್ಯಕ್ರಮಗಳನ್ನು ರೂಪಿಸಲಾಯಿತು ಎಂದು ಹೇಳಿದರು.ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಆರೋಗ್ಯ ತುಮಕೂರು ಅಭಿಯಾನದಡಿ ಜಿಲ್ಲೆಯ 30 ವರ್ಷ ಮೇಲ್ಪಟ್ಟವರಿಗೆಲ್ಲ ಆರೋಗ್ಯ ತಪಾಸಣೆ ಮಾಡಲು ಸರ್ಕಾರ 8 ಜಿಲ್ಲೆಗಳಿಗೆ ನಿರ್ದೇಶನ ನೀಡಿದೆ. ಅದರನ್ವಯ ತುಮಕೂರು ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಕೊರಟಗೆರೆ ತಾಲೂಕಿನಲ್ಲಿ ಚಾಲನೆ ನೀಡಲಾಗಿದೆ.
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಆರೋಗ್ಯ ಇಲಾಖೆಯ ಕುಟುಂಬ ಕಲ್ಯಾಣ ಅಧಿಕಾರಿಯಿಂದ ತಳಮಟ್ಟದ ಆಶಾ ಕಾರ್ಯಕರ್ತರ ವರೆಗೆ ರಾತ್ರಿ ಹಗಲೆನ್ನದೆ ಮುಂದಿನ ೭೫ದಿನಗಳ ಕಾಲ ಎಲ್ಲಾ ಸಾರ್ವಜನಿಕರನ್ನು ತಪಾಸಣೆ ಮಾಡಲು ಶ್ರಮವಹಿಸಿ ದುಡಿಯಬೇಕು ಎಂದು ಕರೆ ನೀಡಿದರು.ಜಿಪಂ ಸಿಇಒ ಜಿ ಪ್ರಭು, ಕರ್ನಾಟಕ ರಾಜ್ಯದ ವಿಶೇಷ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಎಂ.ಟಿ. ಕೃಷ್ಣಪ್ಪ, ಜ್ಯೋತಿ ಗಣೇಶ್, ಹೆಚ್.ವಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ರಿಷಿ ಆನಂದ್, ಡಿಎಚ್ಓ ಡಾ.ಮಂಜುನಾಥ್, ತಹಸೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿ ದೀಪಾಶ್ರೀ ಸೇರಿದಂತೆ ಅನೇಕ ಗಣ್ಯರು ಇದ್ದರು.