ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವೆಂಕಟಸುಬ್ಬಯ್ಯ ಚೆಟ್ಟಿ ಜನ್ಮದಿನದ ಪ್ರಯುಕ್ತ ಶಾಲೆಯ ಆವರಣದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ನಗರದ ಬಾಲು ಆಸ್ಪತ್ರೆ, ನಗು ದಂತ ಚಿಕಿತ್ಸಾಲಯ, ಎಫ್.ಎಂ. ಕಣ್ಣಿನ ಆಸ್ಪತ್ರೆ, ಬೆಳ್ಳಿ ರಕ್ತ ನಿಧಿ, ಒನ್ ಭೂಮಿ ಫೌಂಡೇಷನ್ ಮತ್ತು ಭವ್ಯ ಭಾರತ ಸೇವಾ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಾರು ಮಂದಿ ತಪಾಸಣೆಗೆ ಒಳಗಾದರು. ಬಾಲು ಪಬ್ಲಿಕ್ ಶಾಲೆಯ ಪೋಷಕರು, ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.
ಶಿಬಿರಕ್ಕೆ ಚಾಲನೆ ನೀಡಿದ ಬಾಲು ಪಬ್ಲಿಕ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವೆಂಕಟಸುಬ್ಬಯ್ಯ ಚೆಟ್ಟಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ಜನರನ್ನು ಹೆಚ್ಚಾಗಿ ಕಾಡುತ್ತಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ನಮ್ಮ ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಇಂತಹ ಶಿಬಿರಗಳ ಪ್ರಯೋಜನವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಶಾಲೆಯ ಜಂಟಿ ಕಾರ್ಯದರ್ಶಿ ವಿ. ಬಾಲಸುಬ್ರಹ್ಮಣ್ಯಂ ಮಾತನಾಡಿ, ಪ್ರತಿವರ್ಷ ನಮ್ಮ ಶಾಲೆಯಿಂದ ಆರೋಗ್ಯ ಶಿಬಿರ ಆಯೋಜಿಸುವ ಜೊತೆಗೆ ಶಾಲೆಯಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಶಾಲೆ ಶಿಕ್ಷಣದ ಜತೆಗೆ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.
ಬಾಲು ಆಸ್ಪತ್ರೆಯ ವೈದ್ಯರಾದ ಡಾ.ಶೈಲಜಾ, ಡಾ. ಮನೋಜಂ, ಡಾ.ಕವಿತಾ ಇತರರು ಶಿಬಿರದಲ್ಲಿ ಕಾರ್ಯನಿರ್ವಹಿಸಿದರು. ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಖಾಯಿಲೆಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ತಪಾಸಣೆ ನಡೆಸಿ, ಉಚಿತವಾಗಿ ಕೆಲವು ಔಷಧವನ್ನು ವಿತರಿಸಲಾಯಿತು. ಕಣ್ಣಿನ ತಪಾಸಣೆ ನಡೆಸಿ ಕನ್ನಡಕಗಳನ್ನು ವಿತರಿಸಲಾಯಿತು.ಪೊಟೋ೨೫ಸಿಪಿಟಿ೧: ಚನ್ನಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದರು.