ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಒತ್ತಡದಲ್ಲಿ ಕೆಲಸ ನಿರ್ವಹಿಸುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅತ್ಯವಶ್ಯಕ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುಷ್ಮಾರಾಜು ತಿಳಿಸಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಾರ್ವಜನಿಕ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಕರ್ತರು, ಕುಟುಂಬದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜನರಿಗೆ ಆರೋಗ್ಯ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಸಂಪಾದನೆ ಮಾಡುವ ಭರದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ದುಡ್ಡಿನಿಂದ ಏನು ಬೇಕಾದರೂ ಕೊಂಡುಕೊಳ್ಳಬಹುದು. ಆದರೆ, ಹಣದಿಂದ ಆರೋಗ್ಯವನ್ನು ಕೊಳ್ಳಲು ಸಾಧ್ಯವಿಲ್ಲ ಎನ್ನುವುದನ್ನು ಅರಿತು ಪತ್ರಕರ್ತರು ಸೇರಿದಂತೆ ಎಲ್ಲಾ ಸಾರ್ವಜನಿಕರು ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಳ್ಳಬೇಕೆಂದು ಸಲಹೆ ನೀಡಿದರು.ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ಮಾತನಾಡಿ, ಪ್ರತಿಯೊಬ್ಬರಿಗೂ ದೈಹಿಕ ಮತ್ತು ಮಾನಸಿಕ ಆರೋಗ್ಯ ಮುಖ್ಯವಾಗಿದೆ. ಎಷ್ಟೇ ಆರೋಗ್ಯವಂತರಾಗಿದ್ದರೂ ಕೂಡ ಆಗಿಂದಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕಾದ ಅನಿವಾರ್ಯ ಎದುರಾಗಿದೆ ಎಂದರು.
ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸುವ ಪತ್ರಕರ್ತರು ಸುದ್ದಿಗಾಗಿ ತಮ್ಮ ಆರೋಗ್ಯದ ಕಡೆಗೆ ಗಮನಹರಿಸುವುದು ವಿರಳ. ಇಂದು ಸಾರ್ವಜನಿಕರ ಆಸ್ಪತ್ರೆ ವತಿಯಿಂದ ಪತ್ರಕರ್ತರು, ಕುಟುಂಬ ವರ್ಗದವರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಹೇಳಿದರು.ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಸೇವೆಗಳು ಲಭ್ಯವಾಗಿವೆ. ಜನರು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಆರೋಗ್ಯ ಪರಿಶೀಲನೆ ಮಾಡಿಸಿಕೊಂಡು ರೋಗಕ್ಕೆ ತಕ್ಕಂತೆ ನಿಯಮಿತವಾಗಿ ಔಷಧಿ ಸೇವನೆ ಮಾಡಿ ಗುಣಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ ಮಾತನಾಡಿ, ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಮಾನಸಿಕ ರೋಗಗಳು ಹೆಚ್ಚು ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿವೆ. ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಹೇಳಿದರು.ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸೋಮಶೇಖರ್ ಮಾತನಾಡಿ, ಮಾನಸಿಕ ಆರೋಗ್ಯವು ಮನುಷ್ಯನಿಗೆ ಪ್ರಮುಖ. ಸರ್ಕಾರದ ವತಿಯಿಂದ ಜು.22ರಿಂದ 28ರವರೆಗೆ ವಿಶ್ವ ಮೆದುಳು ಆರೋಗ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರಿಗೆ ಮೆದುಳಿನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮಾನಸಿಕ ಕಾಯಿಲೆಗಳು ಹೆಚ್ಚಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಕರ್ನಾಟಕ ಆರೋಗ್ಯ ಉಪಕ್ರಮ ಕಾರ್ಯಕ್ರಮದ ಮೂಲಕ ಜಿಲ್ಲಾಸ್ಪತ್ರೆಯಲ್ಲಿ ಮಾನಸಿಕ ರೋಗಿಗಳು, ಪಾರ್ಶ್ವವಾಯು, ಡಿಮೆನ್ಯಿಯ ಸೇರಿದಂತೆ ಮೆದುಳಿಗೆ ಸಂಬಂಧಪಟ್ಟ ರೋಗದಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಳಸಿಕೊಳ್ಳಬೇಕೆಂದು ತಿಳಿವಳಿಕೆ ನೀಡಿದರು.ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಸಿದ್ದರಾಜು ಮಾದಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ಹಾಲಿ ಸದಸ್ಯ ನೂರುಲ್ಲಾ, ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಉಮೇಶ್ ಮಾಳಿಗೆ, ಪತ್ರಕರ್ತ ಜಯರಾಜು ಸೇರಿದಂತೆ ಇತರರು ಇದ್ದರು.