ಕರ್ನಾಟಕ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘದ ವತಿಯಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿತ್ತು. ಇಲಾಖೆಯ ಯಾವುದೇ ಅಧಿಕಾರಿ, ನೌಕರ ಸಿಬ್ಬಂದಿಗೆ 5 ವರ್ಷಗಳಿಂದ ಮುಂಬಡ್ತಿ ನೀಡಿಲ್ಲ.
ಕನ್ನಡಪ್ರಭ ವಾರ್ತೆ ಗುಡಿಬಂಡೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಹಾಗೂ ನೌಕರರು ಮಾ.11ರಿಂದ 15ರವರೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಸಂಬಂಧ ಗುಡಿಬಂಡೆ ತಹಸೀಲ್ದಾರ್ ಸಿಗ್ಬತ್ತುಲ್ಲಾ ಅವರಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ತಾಲೂಕು ಅರೋಗ್ಯಾಧಿಕಾರಿ ಡಾ.ಅಕ್ಷಯ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಂಬಂಧ ನಮ್ಮ ಕರ್ನಾಟಕ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘದ ವತಿಯಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿತ್ತು. ಇಲಾಖೆಯ ಯಾವುದೇ ಅಧಿಕಾರಿ, ನೌಕರ ಸಿಬ್ಬಂದಿಗೆ 5 ವರ್ಷಗಳಿಂದ ಮುಂಬಡ್ತಿ ನೀಡಿಲ್ಲ. ನಿಯಮಾನುಸಾರ ಸೇವಾನಿರತ ಸರ್ಕಾರಿ ವೈದ್ಯರು, ಅಧಿಕಾರಿ, ನೌಕರರು ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶವಿದ್ದರೂ ಶಿಕ್ಷಣಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಪ್ರಮುಖ ಬೇಡಿಕೆಗಳು :ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಔಷಧಗಳನ್ನು ಪೂರೈಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕು. ಎಲ್ಲ ವೃಂದದ ಜೇಷ್ಠತಾ ಪಟ್ಟಿಯನ್ನು ಕಾಲ ಕಾಲಕ್ಕೆ ಪ್ರಕಟಿಸಬೇಕು. ಎಲ್ಲ ವೃಂದದ ಅಧಿಕಾರಿನೌಕರರಿಗೆ ಐದು ವರ್ಷಗಳಿಂದ ಮುಂಬಡ್ತಿ ನೀಡಿಲ್ಲ. ಕೂಡಲೇ ಮುಂಬಡ್ತಿ ನೀಡಬೇಕು. ಗುತ್ತಿಗೆ ವೈದ್ಯರು, ನೌಕರರು ಹಾಗೂ ಎಚ್ಎಚ್ಎಂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು. ಕಾಲ ಕಾಲಕ್ಕೆ ವೇತನ ಹೆಚ್ಚಳ ಮಾಡಿ, ನಿಗದಿತ ದಿನದೊಳಗೆ ಪಾವತಿಸಬೇಕು. ಅವೈಜ್ಞಾನಿಕ ಕೌನ್ಸೆಲಿಂಗ್ ಪ್ರಕ್ರಿಯೆ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಈ ಸಮಯದಲ್ಲಿ ಸರ್ಕಾರಿ ನೌಕರರ ಸಂಘದ ಮುನಿಕೃಷ್ಣಪ್ಪ, ಮಂಜುನಾಥ್, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರದೀಪ್ ಸೇರಿದಂತೆ ವಿವಿಧ ತಜ್ಞ ವೈದ್ಯರು, ಸರ್ಕಾರಿ ದಾದಿಯರು ಹಾಗೂ ಸಿಬ್ಬಂದಿ, ಎನ್.ಎಚ್.ಎಂ ಸಿಬ್ಬಂದಿ ಹಾಜರಿದ್ದರು.10ಜಿಯುಡಿ1: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆರೋಗ್ಯ ಇಲಾಖೆ ಸಿಬ್ಬಂದಿ ಹಮ್ಮಿಕೊಂಡಿರುವ ಪ್ರತಿಭಟನೆಯ ಸಂಬಂಧ ಗುಡಿಬಂಡೆ ತಹಸೀಲ್ದಾರರಿಗೆ ನೌಕರರು ಮನವಿ ಪತ್ರ ಸಲ್ಲಿಸಿದರು.