ಹುಬ್ಬಳ್ಳಿ:
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಗರದ ಶಿವ ಗಣೇಶ ದೇವಸ್ಥಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗುರುವಾರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರಮೇಶ ಮಾದೇವಪ್ಪನವರ, ಆರೋಗ್ಯವೇ ನಿಜವಾದ ಭಾಗ್ಯ. ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಧರ್ಮಸ್ಥಳ ಸಂಸ್ಥೆ ಇಂತಹ ಶಿಬಿರಗಳನ್ನು ನಡೆಸುತ್ತಿದೆ. ಪ್ರತಿಯೊಬ್ಬರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯಕರ ಜೀವನ ನಡೆಸಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಕಂಡೇಕರ ಮಾತನಾಡಿ, ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ನಡೆಯುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಕಾರ್ಯಗಳು ಅನುಕರಣೀಯವಾಗಿವೆ ಎಂದರು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ಷೇತ್ರ ಯೋಜನಾಧಿಕಾರಿ ಸೋಮಲಿಂಗ ಕೆ ಅವರು, ಜ್ಞಾನ ವಿಕಾಸ ಕಾರ್ಯಕ್ರಮದಡಿ ತಾಲೂಕಿನಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.ಈ ವೇಳೆ ಐಬಡ್ಡಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರಾಜಶೇಖರ್ ಪಾಟೀಲ್ ಅವರು "ಕಣ್ಣಿನ ಮಹತ್ವ ಹಾಗೂ ಕಣ್ಣಿನ ಕಾಯಿಲೆಗಳಿಂದಾಗುವ ಪರಿಣಾಮಗಳು ಕುರಿತು ವಿಶೇಷ ಉಪನ್ಯಾಸ ನೀಡಿದರು. 100ಕ್ಕೂ ಹೆಚ್ಚು ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕಣ್ಣಿನ ತಪಾಸಣೆ ಸೇರಿದಂತೆ ಹಲವಾರು ತಪಾಸಣೆ ನಡೆಸಲಾಯಿತು.
ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕ ರವಿಶಂಕರ ನಿರೂಪಿಸಿದರು. ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿರ್ಮಲಾ ಸ್ವಾಗತಿಸಿದರು.