ಬೆಂಗಳೂರು ಆರೋಗ್ಯ ವ್ಯವಸ್ಥೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ದಿನೇಶ್‌

| Published : Feb 03 2024, 01:48 AM IST

ಬೆಂಗಳೂರು ಆರೋಗ್ಯ ವ್ಯವಸ್ಥೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ದಿನೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

‘ಬೆಂಗಳೂರು ಆರೋಗ್ಯ ವ್ಯವಸ್ಥೆ’ ಜಾರಿಗೊಳಿಸುವ ಬಗ್ಗೆ ಅಂತಿಮ ನಿರ್ಧಾರದೊಂದಿಗೆ ತ್ವರಿತವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ದೇಶನ

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಬೆಂಗಳೂರು ಆರೋಗ್ಯ ವ್ಯವಸ್ಥೆ’ ಜಾರಿಗೊಳಿಸುವ ಬಗ್ಗೆ ಅಂತಿಮ ನಿರ್ಧಾರದೊಂದಿಗೆ ತ್ವರಿತವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ದೇಶಿಸಿದ್ದಾರೆ.

ಶುಕ್ರವಾರ ಎಂ.ಸಿ.ಲೇಔಟ್‌ನ ಬಿಬಿಎಂಪಿ ಹೈಟೆಕ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಪ್ರತ್ಯೇಕ ಆರೋಗ್ಯ ವ್ಯವಸ್ಥೆ ಜಾರಿಗೊಳಿಸುವ ಸಂಬಂಧಿಸಿದಂತೆ ಬಿಬಿಎಂಪಿಯು ಅಂತಿಮ ತೀರ್ಮಾನದೊಂದಿಗೆ ಸರ್ಕಾರಕ್ಕೆ ತ್ವರಿತವಾಗಿ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಕಿಶೋರ್‌ ವಿಕಾಸ್‌ ಸೂರಳ್ಕರ್, ಪ್ರತ್ಯೇಕ ಆರೋಗ್ಯ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಾಕಷ್ಟು ಚರ್ಚೆ ನಡೆಸಲಾಗಿದೆ. ಎರಡ್ಮೂರು ದಿನದಲ್ಲಿ ಆಡಳಿತಾಧಿಕಾರಿ ಮತ್ತು ಮುಖ್ಯ ಆಯುಕ್ತರೊಂದಿಗೆ ಮತ್ತೊಮ್ಮೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.

ಇದೇ ವೇಳೆ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಎಂ.ಸಿ.ಲೇಔಟ್‌ನ ಪಾಲಿಕೆ ಆಸ್ಪತ್ರೆ, ವೈದ್ಯಕೀಯ ಸೇವೆಗಳು, ಉಪಕರಣಗಳು, ವೈದ್ಯಕೀಯ ಸಿಬ್ಬಂದಿ, ಆಡಳಿತ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ವೇಳೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌, ಪಾಲಿಕೆ ಕ್ಲಿನಿಕಲ್‌ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ। ನಿರ್ಮಲಾ ಬುಗ್ಗಿ, ಪಾಲಿಕೆ ಸಾರ್ವಜಿಕ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ। ಸೈಯದ್‌ ಸಿರಾಜುದೀನ್‌ ಮದಿನಿ, ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಇದ್ದರು.