ಈಗಾಗಲೇ ಮದ್ದೂರು ತಾಲೂಕು ಆಸ್ಪತ್ರೆಯನ್ನು 7 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನವೀಕರಣ ಮಾಡುವ ಜೊತೆಗೆ ಮೇಲ್ದರ್ಜೆಗೆರಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯರು ಹಾಗೂ ಸಿಬ್ಬಂದಿ ವಸತಿ ಗೃಹ,‌ ನೂತನ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹೋಬಳಿ ಹಂತದ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಶೀಘ್ರ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು.

ತಾಲೂಕಿನ ಬೆಸಗರಹಳ್ಳಿಯ ಮಹರ್ನವಮಿದೊಡ್ಡಿ ಗ್ರಾಮದಲ್ಲಿ ಅಂದಾಜು 65 ಲಕ್ಷ ರು. ವೆಚ್ಚದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ನೀಡಿರುವ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನದಲ್ಲಿ ವಿಶೇಷವಾಗಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.

ಈಗಾಗಲೇ ತಾಲೂಕು ಆಸ್ಪತ್ರೆಯನ್ನು 7 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನವೀಕರಣ ಮಾಡುವ ಜೊತೆಗೆ ಮೇಲ್ದರ್ಜೆಗೆರಿಸಲು ಕ್ರಮ ಕೈಗೊಳ್ಳಲಾಗಿದೆ. ವೈದ್ಯರು ಹಾಗೂ ಸಿಬ್ಬಂದಿ ವಸತಿ ಗೃಹ,‌ ನೂತನ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು.

ತಾಲೂಕಿನ ಹೋಬಳಿ ಹಂತದ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲಾಗುತ್ತಿದೆ. ಕೆಲವು ಕಡೆ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇರುವುದು ನಿಜ. ಹೀಗಾಗಿ ಒಂದು ಬಾರಿ ತಾಲೂಕಿನ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಬಳಿ ಮನವಿ ಮಾಡಲಾಗಿದೆ. ಶೀಘ್ರ ಭೇಟಿ ನೀಡಿ ಪರಿಸೀಲಿಸಲಿದ್ದಾರೆ ಎಂದರು.

ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಡ್ಯ ಮಿಮ್ಸ್ ಆಸ್ಪತ್ರೆ ವೈದ್ಯರು ನಿಯೋಜನೆ ಮಾಡುವಂತೆ ಕಳೆದ ಎರಡು ತಿಂಗಳ ಹಿಂದೆಯೇ ಪತ್ರ ವ್ಯವಹಾರ ಮಾಡಲಾಗಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೆಲವು ವೈದ್ಯರು ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಇದೇ ವೇಳೆ ಆಕಸ್ಮಿಕವಾಗಿ ಅಪಘಾತ ಸಂಭವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಎಂದು ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ವೇಳೆ ಗ್ರಾಪಂ ಮಾಜಿ ಸದಸ್ಯ ಬಾಬು, ಉಮೇಶ್, ರಾಕೇಶ್, ಮಂಜುನಾಥ್, ಚಿಕ್ಕಣ್ಣ, ಕಾಂತರಾಜು ಮುಖಂಡರಾದ ಧನಂಜಯ, ಗೋಪಿ, ಶೇಖರ್, ಗಿರೀಶ್, ನಿರಂಜನ್, ನಿಖಿಲ್ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಶಂಕರ್, ಶಿವು, ಹರ್ಷ ಮತ್ತಿತರರು ಇದ್ದರು.