ದುಶ್ಚಟಗಳು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಮಕ್ಕಳು ದುಶ್ಚಟಗಳ ದಾಸರಾಗದೆ ಸ್ವಸ್ಥ್ಯ ಸಮಾಜ ನಿರ್ಮಿಸುವ ಸಂಕಲ್ಪ ಮಾಡಬೇಕು ಎಂದು ಧರ್ಮಸ್ಥಳ ಸಂಸ್ಥೆಯ ಮೇಲ್ವಿಚಾರಕ ನಿಂಗಪ್ಪ ಪಾಟೀಲ ಹೇಳಿದರು.
ಲಕ್ಷ್ಮೇಶ್ವರ: ದುಶ್ಚಟಗಳು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಮಕ್ಕಳು ದುಶ್ಚಟಗಳ ದಾಸರಾಗದೆ ಸ್ವಸ್ಥ್ಯ ಸಮಾಜ ನಿರ್ಮಿಸುವ ಸಂಕಲ್ಪ ಮಾಡಬೇಕು ಎಂದು ಧರ್ಮಸ್ಥಳ ಸಂಸ್ಥೆಯ ಮೇಲ್ವಿಚಾರಕ ನಿಂಗಪ್ಪ ಪಾಟೀಲ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ವತಿಯಿಂದ ಆಯೋಜನೆಗೊಂಡಿದ್ದ ಸ್ವಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ವೀರೇಂದ್ರ ಹೆಗ್ಗಡೆಯವರು ಹಲವಾರು ಸಮಾಜಮುಖಿ ಕಾರ್ಯಕ್ರಮ ನಡೆಸುತ್ತಿದ್ದು, ಅದರಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮ, ಮಧ್ಯವರ್ಜನ ಶಿಬಿರ, ಮಹಿಳೆಯರಿಗಾಗಿ ಜ್ಞಾನ ವಿಕಾಸ ಕಾರ್ಯಕ್ರಮ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಈ ವೇಳೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಮೀನಾಕ್ಷಿ ಮಟ್ಟಿ ಮಾತನಾಡಿ, ಮಾದಕ ವಸ್ತುಗಳ ಬಳಕೆಯಿಂದಾಗಿ ಮಕ್ಕಳ ಆರೋಗ್ಯ ಹಾಳಾಗುವುದಲ್ಲದೆ ಕೌಟುಂಬಿಕ ಮತ್ತು ಸಮಾಜದ ಸ್ವಾಸ್ಥ್ಯ ಕೆಟ್ಟುಹೋಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕಾನೂನಿನ ಬಗ್ಗೆ ಅರಿವು ಮೂಡಿಸಿದರು. ಪೋಕ್ಸೋ ಕಾಯ್ದೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಲೈಂಗಿಕ ದೌರ್ಜನ್ಯ ಕಾನೂನಿನ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮುಖ್ಯೋಪಾಧ್ಯಾಯ ಬಿ.ಸಿ. ಪಟ್ಟೇದ ಮಾತನಾಡಿ, ಮಕ್ಕಳಿಗೆ ಚಿಕ್ಕಂದಿನಿಂದಲೇ ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸುವ ಜೊತೆಯಲ್ಲಿ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ, ಕುಟುಂಬದ ಪ್ರತಿಯೊಬ್ಬರೂ ಅದರಿಂದ ದೂರ ಇದ್ದು, ಕುಟುಂಬದ ಸ್ವಾಸ್ಥ್ಯ ಕಾಪಾಡಿದಲ್ಲಿ ಸಮಾಜ ಹಾಗೂ ದೇಶ ಇದರಿಂದ ಮುಕ್ತವಾಗಲು ಸಾಧ್ಯ ಎಂದು ಹೇಳಿದರು.
ಈ ವೇಳೆ ಶಾಲಾ ಮಕ್ಕಳಿಗೆ ದುಶ್ಚಟಗಳಿಂದ ಆಗುವ ಪರಿಣಾಮಗಳ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.ಶಾಲೆಯ ಸಹ ಶಿಕ್ಷಕರು, ಸೇವಾಪ್ರತಿನಿಧಿಗಳು ಇದ್ದರು. ಶಿಕ್ಷಕ ಎ.ಎಂ. ಅಕ್ಕಿ ನಿರೂಪಿಸಿದರು. ಎನ್.ಬಿ. ರೆಡ್ಡರ ವಂದನಾರ್ಪಣೆ ಮಾಡಿದರು.