ಸಾರಾಂಶ
ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಗುಣಪಡಿಸುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಗ್ರಾಮೀಣ ಪ್ರದೇಶಗಳಲ್ಲಿ ಸ್ಕ್ರೀನಿಂಗ್‌ಗೆ ಆದ್ಯತೆ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಗುಣಪಡಿಸುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಗ್ರಾಮೀಣ ಪ್ರದೇಶಗಳಲ್ಲಿ ಸ್ಕ್ರೀನಿಂಗ್‌ಗೆ ಆದ್ಯತೆ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಭಾನುವಾರ ಆರೋಗ್ಯ ಇಲಾಖೆ ಹಾಗೂ ಸರ್ಜಿಕಲ್ ಸೊಸೈಟಿ ಆಫ್ ಬೆಂಗಳೂರು, ಜೆಎಸ್ ಕ್ಯಾನ್ಸರ್ ಫೌಂಡೇಶನ್, ನವೋದಯ ಇನ್ ಬೆಂಗಳೂರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕ್ಯಾನ್ ವಾಕ್-2024’ ಜಾಗೃತಿ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ನಿಯಮಿತ ವ್ಯಾಯಾಮ, ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಸೇರಿದಂತೆ ಆರೋಗ್ಯಪೂರ್ಣ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಮೂಲಕ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು. ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆ ಮಾಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದು. ಇದಕ್ಕಾಗಿ ಗ್ರಾಮೀಣ ಭಾಗದಲ್ಲಿ ಸ್ಕ್ರೀನಿಂಗ್ ಆದ್ಯತೆ ನೀಡಲಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ವ್ಯವಸ್ಥಾಪಕ ನಿರ್ದೇಶಕ ನವೀನ್ ಭಟ್ ಸೇರಿ ಹಲವರು ಹಾಜರಿದ್ದರು.
- - -ಬಾಕ್ಸ್...ನಡಿಗೆಗೆ ನಟ ಪ್ರೇಮ್ ಸಾಥ್
ಈ ವೇಳೆ ನಟ ಪ್ರೇಮ್, ನವೋದಯ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ‘ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಕೈ ಜೋಡಿಸಿ’ ಎಂಬ ಘೋಷವಾಕ್ಯದಡಿ 5 ಕಿ.ಮೀ. ವರೆಗೆ ವಾಕಥಾನ್ ನಡೆಯಿತು.