ಸಾರಾಂಶ
ಮುಂದಿನ 24 ಗಂಟೆಯಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆಲವು ಜಿಲ್ಲೆಗಳಿಗೆ ‘ಆರೆಂಜ್’ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆಲವು ಜಿಲ್ಲೆಗಳಿಗೆ ‘ಆರೆಂಜ್’ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬುಧವಾರ ಒಂದೆರಡು ಕಡೆಗಳಲ್ಲಿ ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ಘೋಷಿಸಲಾಗಿದೆ.ಏ.26ರಿಂದ 30ವರೆಗೆ ಉಷ್ಣ ಅಲೆ
ಏ.26 ರಿಂದ ಏ.30ರ ವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಬಿಸಿಲು ಪ್ರಮಾಣ ಹೆಚ್ಚಾಗಲಿದೆ, ಹೀಗಾಗಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದಾವಣಗೆರೆಯಲ್ಲಿ ಅತಿ ಹೆಚ್ಚು 5 ಸೆಂ.ಮೀ ಮಳೆಯಾಗಿದೆ. ರೋಣ, ಅಲಮಟ್ಟಿ ಹಾಗೂ ಮಂಠಾಳದಲ್ಲಿ ತಲಾ 3, ಹಾವೇರಿ, ಹುಬ್ಬಳ್ಳಿ, ಹುಮನಾಬಾದ್ ನಲ್ಲಿ ತಲಾ 2, ಸವಣೂರು, ಔರಾದ್ ಸೇರಿದಂತೆ ರಾಜ್ಯದ ವಿವಿಧ ಕಡೆ 1 ಸೆಂ.ಮೀ ನಷ್ಟು ಮಳೆಯಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.